ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕಲಬುರಗಿ:
ಶನಿವಾರ ತಡರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದ ಜಿಲ್ಲೆಯ ಸೇಡಂ ತಾಲೂಕಿನ ಸಂಗಾವಿ ಗ್ರಾಮದ ಸಂಗಮೇಶ್ವರ ದೇವಾಲಯ ಜಲಾವೃತಗೊಂಡಿದೆ.
ತಡರಾತ್ರಿ ಸುರಿದ ಮಳೆಯಿಂದಾಗಿ ಜಿಲ್ಲೆಯ ಚಿಂಚೋಳಿ, ಕಾಳಗಿ ಮಳೆಯ ಆಬ್ಬರ ಅವಾಂತರಕ್ಕೆ ಎಡೆ ಮಾಡಿದೆ. ಕಾಳಗಿ ತಾಲೂಕಿನ ಹಳೆ ಹೆಬ್ಬಾಳ ಗ್ರಾಮದ ಅನೇಕ ಮನೆಗಳು ಜಲಾವೃತಗೊಂಡಿದ್ದು, ಬೆಣ್ಣೆತೋರಾ ಡ್ಯಾಮ ನಿಂದ ನೀರು ಬಿಟ್ಟಿದ್ದರಿಂದ ಹಳ್ಳಗಳು ತುಂಬಿ ಹರಿಯುತ್ತಿವೆ. ಇದರೊಂದಿಗೆ ಅನೇಕ ಗ್ರಾಮಗಳಿಗೆ ಮಳೆ ನೀರು ನುಗ್ಗಿವೆ.
ಅದೇ ರೀತಿ ಕಾಳಗಿ ತಾಲೂಕಿನ ನೀಲಕಂಠೇಶ್ವರ ದೇವಸ್ಥಾನವು ಮಳೆ ನೀರಿನಿಂದ ಸಂಪೂರ್ಣ ಜಲಾವೃತಗೊಂಡು, ನೂರಾರು ಎಕರೆ ಜಮೀನುಗಳಿಗೆ ನೀರು ನುಗ್ಗಿ ಬೆಳೆ ನಾಶವಾಗಿವೆ.
ಇನ್ನೂ ರಾತ್ರಿ ಸುರಿದ ಮಳೆಯಿಂದ ಮಳಖೇಡ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತವಾದ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಲವೆಡೆ ಮಳೆ ಅವಾಂತರದಿಂದ ದೇಗಲಮಡಿ ಗ್ರಾಮದೊಳಗೆ ನೀರು ನುಗ್ಗಿದ್ದು, ಐವತ್ತು ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದೆ.
ಚಿಂಚೋಳಿ ತಾಲೂಕಿನ ಪಟಪಳ್ಳಿ,ಹಸರಗುಂಡಗಿ,ಗಡಿಕೇಶ್ವರ, ಯಂಪಳ್ಳಿ, ಕಂಚಿನಾಳ, ಶಾದಿಪೂರ ಗ್ರಾಮಗಳಿಗೆ ನೀರು ನುಗ್ಗಿ, ರಾತ್ರೋ ರಾತ್ರಿ ಮನೆಯಲ್ಲಿದ್ದ ಸಾಮಾನುಗಳನ್ನು ಸ್ಥಳಾಂತರ ಮಾಡಲು ಹರಸಾಹಸ ಪಡುವಂತಾಗಿದೆ.