ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿದ ಘಟನೆ ಆತಂಕ ಮೂಡಿಸಿದೆ. ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಗಂಭೀರ ಪರಚಿದ ಗಾಯಗಳಾಗಿವೆ.
ಘಟನೆಯ ವೇಳೆ ರಾಜಶೇಖರಪ್ಪ ಧೈರ್ಯ ಕಳೆದುಕೊಳ್ಳದೆ ಪ್ರತಿರೋಧ ತೋರಿದ ಪರಿಣಾಮ ಚಿರತೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ವೈದ್ಯರ ಮಾಹಿತಿ ಪ್ರಕಾರ, ಗಾಯಗಳು ಗಂಭೀರವಾದರೂ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಘಟನೆಯ ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ ಎನ್ನಲಾಗುತ್ತಿದ್ದು, ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿದೆ. ಜನರು ರಾತ್ರಿ ಸಮಯದಲ್ಲಿ ಹೊರಗೆ ಹೋಗಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ.
ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿದು ಗ್ರಾಮಸ್ಥರ ಭದ್ರತೆ ಖಚಿತಪಡಿಸಬೇಕು ಎಂದು ಸ್ಥಳೀಯರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.



