ಹೊರದಿಗಂತ ವರದಿ, ಕೊಡಗು:
ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿಕೊಂಡಿರುವ ಬಿಜೆಪಿ ನೇತೃತ್ವದ ಸರಕಾರ ತಾಕತ್ತಿದ್ದರೆ ಅವುಗಳನ್ನು ನಿಷೇಧಿಸಲಿ ಎಂದು ಸವಾಲು ಹಾಕಿರುವ ಕೆಪಿಸಿಸಿ ಕಾರ್ಯದರ್ಶಿ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕ ಟಿ.ಎಂ.ಶಾಹಿದ್ ಅವರು, ಕಾಂಗ್ರೆಸ್ ಮತಗಳನ್ನು ವಿಭಜಿಸುವ ಕಾರಣಕ್ಕಾಗಿಯೇ ಸರಕಾರ ಈ ಸಂಘಟನೆಗಳ ನಿಷೇಧಕ್ಕೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ ಡಿಪಿಐ ಹಾಗೂ ಪಿಎಫ್ ಐ ಸಂಘಟನೆಗಳನ್ನು ನಿಷೇಧಿಸುವುದಾಗಿ ಹೇಳಿಕೊಂಡಿರುವ ಬಿಜೆಪಿ ಪರೋಕ್ಷವಾಗಿ ಇದೇ ಸಂಘಟನೆಗಳ ಬೆಂಬಲದಿಂದ ಹೈದರಾಬಾದ್ ಮತ್ತು ಗುಜರಾತ್ನಲ್ಲಿ ಅಧಿಕಾರದ ಗದ್ದುಗೆ ಏರಿದೆ.ಇದಕ್ಕಾಗಿಯೇ ಇಲ್ಲಿಯವರೆಗೆ ಈ ಎರಡು ಸಂಘಟನೆಗಳ ವಿರುದ್ಧ ಹತೋಟಿ ಸಾಧಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಪ್ಪು ನಿರ್ಧಾರಗಳಿಂದಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಜನರು ಸಂಕಷ್ಟಕ್ಕೆ ಸಿಲುಕಿದ್ದು, ಯಾವುದೇ ಪ್ರತಿಭಟನೆಗಳಿಗೆ ಹೃದಯ, ಕಣ್ಣು, ಕಿವಿ ಇಲ್ಲದ ಸರ್ಕಾರ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು.
ಶಿಕ್ಷಣ ಸಂಸ್ಥೆಗಳನ್ನು ಕೋವಿಡ್ ಪರಿಸ್ಥಿತಿಯಿಂದಾಗಿ ನಿರ್ವಹಣೆ ಮಾಡುವುದೇ ಕಷ್ಟವಾಗಿದೆ. ವಿದ್ಯಾರ್ಥಿಗಳು ಕೂಡ ಶೈಕ್ಷಣಿಕವಾಗಿ ಅಡೆ ತಡೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರ ಶಿಕ್ಷಣ ಸಂಸ್ಥೆ ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರಾಜ್ಯ ಸರ್ಕಾರದಲ್ಲಿ ಸಮನ್ವಯತೆ ಇಲ್ಲದಾಗಿದ್ದು, ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆಯೆಂದು ಟೀಕಿಸಿದರು.
ಮೀಸಲಾತಿಗಾಗಿ ವಿವಿಧ ಜನಾಂಗಗಳು ಹೋರಾಟಕ್ಕೆ ಇಳಿದಿವೆ. ಆದರೆ, ಸರ್ಕಾರ ದುಂಡು ಮೇಜಿನ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಚಿಂತನೆ ನಡೆಸದೆ ಮೌನಕ್ಕೆ ಶರಣಾಗಿದೆ. ಅಲ್ಪಸಂಖ್ಯಾತ ಸಮೂಹಕ್ಕೆ ವೀರಪ್ಪಮೊಯ್ಲಿಯವರು ಅಧಿಕಾರದಲ್ಲಿದ್ದ ಅವಧಿಯಲ್ಲಿ ನೀಡಿರುವ ಶೇ.4ರ ಮೀಸಲಾತಿಯನ್ನು ಕಡಿತಗೊಳಿಸುವ ಪ್ರಯತ್ನ ಈ ಸರ್ಕಾರದಿಂದ ನಡೆಯುತ್ತಿದೆ ಎಂದು ದೂರಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಸದಸ್ಯ ಪುಷ್ಪ ಪೂಣಚ್ಚ, ಮಡಿಕೇರಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಪಾಷ ಹಾಗೂ ಎಸ್ಸಿ ಘಟಕದ ಅಧ್ಯಕ್ಷ ಮುದ್ದು ರಾಜ್ ಉಪಸ್ಥಿತರಿದ್ದರು.