ಲೋಕಸಭಾ ಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರ ನೀಡೋಣ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬರಗಾಲದ ಪರಿಸ್ಥಿತಿಯಲ್ಲೂ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ. ರೈತರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು, ಅಧಿಕಾರದ ದರ್ಪ, ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರವನ್ನು ನೀಡೋಣ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಹೊಸ ಸರಕಾರ ಬಂದಿದೆ. ಶೇ 40ರಷ್ಟು ಸರಕಾರ ಎಂದು ಟೀಕಿಸಿದ್ದರು. ಮತದಾರರೂ ಅದನ್ನು ನಂಬಿದ್ದರು. ಹೊಸ ಕಾಂಗ್ರೆಸ್ ಸರಕಾರ ಬಂದು 6 ತಿಂಗಳಾಗಿದೆ. ಹಗಲುದರೋಡೆ, ಭ್ರಷ್ಟಾಚಾರ ಮಿತಿ ಮೀರಿದೆ. ಶೇ 40 ಕಮಿಷನ್, ಭ್ರಷ್ಟಾಚಾರದ ಅನುಷ್ಠಾನ ಕಾಂಗ್ರೆಸ್ ಸರಕಾರದಿಂದ ಆಗುತ್ತಿದೆ ಎಂದು ಆಕ್ಷೇಪಿಸಿದರು.

28ಕ್ಕೆ 28 ಕ್ಷೇತ್ರ ಗೆಲ್ಲುವ ಭರವಸೆ

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನೂ ಮರೆಯದಿರೋಣ ಎಂದು ಕಿವಿಮಾತು ಹೇಳಿದ ಅವರು, ಅವನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು. ಚುನಾವಣೆ ಗೆದ್ದ ಬಳಿಕ ನಾನು ಯಾವುದೇ ಸಮುದಾಯಕ್ಕೆ ಸೇರಿದವನಲ್ಲ. 28ಕ್ಕೆ 28 ಕ್ಷೇತ್ರ ಗೆಲ್ಲುವ ಜೊತೆಜೊತೆಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೂಡ ರಾಜ್ಯವನ್ನು ಬಿಜೆಪಿ ಭದ್ರಕೋಟೆಯಾಗಿ ಮಾಡಲು ಶ್ರಮಿಸುತ್ತೇನೆ ಎಂದರು.

ನಾವೇನೂ ಆಪರೇಷನ್ ಕಮಲ ಮಾಡುವುದಿಲ್ಲ. ಆಡಳಿತ ಪಕ್ಷದ ಶಾಸಕರೇ ರಸ್ತೆಯಲ್ಲಿ ಓಡಾಡದಂತಾಗಿದೆ. ಒಂದು ರೂಪಾಯಿ ಅನುದಾನ ಸಿಗುತ್ತಿಲ್ಲ. ಈ ದುಷ್ಟ ಸರಕಾರಕ್ಕೆ ಆ ಪಕ್ಷದ ಶಾಸಕರೇ ಪಾಠ ಕಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ

ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ, ಸಂಘ ಪರಿವಾರದ ಮಾರ್ಗದರ್ಶನದಡಿ ಬಿಜೆಪಿಗೆ ಶಕ್ತಿ ತುಂಬುತ್ತೇನೆ. ಹಗಲು ರಾತ್ರಿ ಪ್ರವಾಸ ಮಾಡಿ, ರೈತರು, ಬಡವರ ಪರವಾಗಿ ಧ್ವನಿ ಎತ್ತುವೆ. ಭ್ರಷ್ಟ ಸರಕಾರದ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಪ್ರಕಟಿಸಿದರು.

ಕೊಟ್ಟ ಜವಾಬ್ದಾರಿಯನ್ನು ಉಳಿಸಿಕೊಳ್ಳುವೆ

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರ ಕೃಪಾಶೀರ್ವಾದದಿಂದ ಈ ಜವಾಬ್ದಾರಿ ಸಿಕ್ಕಿದೆ. ಇದಕ್ಕಾಗಿ ಎಲ್ಲ ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆಗಳು ಎಂದು ತಿಳಿಸಿದರು. ನನ್ನ ಮೇಲಿನ ವಿಶ್ವಾಸ ಉಳಿಸಿಕೊಳ್ಳುವೆ. ಶಾಸಕರಾಗಿ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದರು.

ನಡ್ಡಾ ಅವರು ನನ್ನ ಹೆಸರು ಪ್ರಕಟಿಸಿದ ಬಳಿಕ ಎಲ್ಲ ಹಿರಿಯ ನಾಯಕರ ಜೊತೆ ಮಾತನಾಡಿದ್ದೇನೆ. ಪಕ್ಷದ ಎಲ್ಲ ಹಿರಿಯರು ನನಗೆ ಬೆನ್ನು ತಟ್ಟಿದ್ದಾರೆ. 28ರಲ್ಲಿ 28 ಕ್ಷೇತ್ರ ಗೆಲ್ಲುವ ಮೂಲಕ ದೇಶದ ಭವಿಷ್ಯ ನಿರ್ಮಿಸುವ ನಿಸ್ವಾರ್ಥ ಕೆಲಸಗಾರ, ದೇಶ ಮೊದಲೆಂಬ ವಿಚಾರ ಮನದಲ್ಲಿ ಇಟ್ಟುಕೊಂಡು ಕೈಂಕರ್ಯನಿರತ ಪ್ರಧಾನಿಯವರ ಕೈಯನ್ನು ಬಲಪಡಿಸಲಿದ್ದೇವೆ ಎಂದು ತಿಳಿಸಿದರು.

ದೇಶದ ಭವಿಷ್ಯ ರೂಪಿಸುವ ಲೋಕಸಭಾ ಚುನಾವಣೆಯು ಅತ್ಯಂತ ಮಹತ್ವದ್ದು, ನನಗಿತ್ತ ಸ್ಥಾನದ ಮಹತ್ವ ನನಗೆ ಗೊತ್ತಿದೆ. ಯಡಿಯೂರಪ್ಪ ಅವರ ಹೋರಾಟ, ಸಾಮಾನ್ಯ ಕಾರ್ಯಕರ್ತರಿಗೆ ಗೌರವ ಕೊಡುವ ಪ್ರವೃತ್ತಿ ನನಗೆ ತಿಳಿದಿದೆ. ಕಾರ್ಯಕರ್ತರು ತಲೆ ತಗ್ಗಿಸುವ ಸಂದರ್ಭ ಸೃಷ್ಟಿಸಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.

ನಿರ್ಗಮಿತ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಮಾತನಾಡಿ, ತಮಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರಲ್ಲದೆ, ಮುಂದೆಯೂ ವಿಜಯೇಂದ್ರರಿಗೆ ಎಲ್ಲ ರೀತಿಯ ಸಹಕಾರ ಮತ್ತು ಮಾರ್ಗದರ್ಶನ ನೀಡಲು ವಿನಂತಿಸಿದರು.

ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ಅಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಮಾಜಿ ಡಿಸಿಎಂಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ್, ಹಿರಿಯ ನಾಯಕ ರಾಮಚಂದ್ರ ಗೌಡ, ಮಾಜಿ ಸಚಿವರು, ಮಾಜಿ ಹಾಲಿ ಶಾಸಕರು, ಜಿಲ್ಲಾಧ್ಯಕ್ಷರು, ಸಂಸದರು, ಪಕ್ಷದ ರಾಜ್ಯ-ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು ಭಾಗವಹಿಸಿದ್ದರು. ಬಳಿಕ ಎಲ್ಲ ಪ್ರಮುಖರು ವಿಜಯೇಂದ್ರ ಅವರನ್ನು ಅಭಿನಂದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!