ಕಲಬುರಗಿಯನ್ನು ನಂ.1 ಸ್ಥಾನಕ್ಕೆ ತರಲು ಶ್ರಮಿಸೋಣ: ಡಾ. ಮುರುಗೇಶ ಆರ್. ನಿರಾಣಿ

ದಿಗಂತ ವರದಿ ಕಲಬುರಗಿ:

ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಕಂಡು ಮುಂಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯು ಎಲ್ಲಾ ಕ್ಷೇತ್ರಗಳಲ್ಲಿ ನಂಬರ್ ಒನ್ ಸ್ಥಾನಕ್ಕೆ ತರಬೇಕು ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಅವರು ಪ್ರತಿಪಾದಿಸಿದರು.

ಬುಧವಾರ ಕಲಬುರಗಿ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಭಾರತದ 73ನೇ ಗಣರಾಜ್ಯೋತ್ಸವ ದಿನಾಚರಣೆಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಹಾಗೂ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಮುಂದಿನ ಐದು ವರ್ಷಗಳಲ್ಲಿ ಕಲಬುರಗಿ ಜಿಲ್ಲೆಯು ರಾಜ್ಯದಲ್ಲಿ ಟಾಪ್ 10ನೇ ಜಿಲ್ಲೆಗಳಲ್ಲಿ ಒಂದಾಗಬೇಕು. ಜನಪ್ರತಿನಿಧಿಗಳು,ಅಧಿಕಾರಿಗಳು ಸೇರಿದಂತೆ ಎಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.

ಜೊತೆಗೆ ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಠಿಕೋನದಿಂದ ಮುಂದಿನ 30 ವರ್ಷದಲ್ಲಿ ಸಾಧಿಸಬೇಕಾದ ಪ್ರಗತಿ ಕುರಿತು ನಿಖರ ಮಾಹಿತಿ ಸಂಗ್ರಹಿಸಿ ಅದರಂತೆ ಅನುಷ್ಠಾನಗೊಳಿಸಲು ಕಲಬುರಗಿ ವಿಜನ್-2050 ಡಾಕ್ಯೂಮೆಂಟ್ ಸಿದ್ಧಪಡಿಸಲಾಗುತ್ತಿದ್ದು, ಇದು ಜಿಲ್ಲೆಯ ಅಭಿವೃದ್ಧಿಗೆ ದಿಕ್ಸೂಚಿಯಾಗಲಿದೆ ಎಂದರು.

371ಜೆ ಅನ್ವಯ ರಚನೆಗೊಂಡ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಇಲ್ಲಿಯವರೆಗೆ ಕಲಬುರಗಿ ಜಿಲ್ಲೆಗೆ ರೂ.2,771.25 ಕೋಟಿ ಅನುದಾನ ಹಂಚಿಕೆಯಾಗಿ ರೂ. 1,712.48 ಕೋಟಿ ಖರ್ಚು ಮಾಡಲಾಗಿದೆ. ಒಟ್ಟಾರೆಯಾಗಿ 8,095 ಕಾಮಗಾರಿಗಳನ್ನು ಕೈಗೆತ್ತಿಕೊಂಡು, 6,700 ಪೂರ್ಣಗೊಳಿಸಿದ್ದು, 1,395 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕಾ ಕ್ರಾಂತಿಗೆ ಸರ್ಕಾರ ಅತೀವ ಆಸಕ್ತಿ ಹೊಂದಿದೆ. ನೂತನ ಕೈಗಾರಿಕಾ ನೀತಿ 2020-25ರಲ್ಲಿ ಬೆಂಗಳೂರು ದಾಚೆಗೆ 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೂಡಿಕೆ ಮಾಡುವ ಉದ್ಯಮಿಗಳಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯನ್ನು ಗರಿಷ್ಠ ರಿಯಾಯಿತಿ ಮತ್ತು ಪ್ರೋತ್ಸಾಹ ದೊರೆಯಲು ವಲಯ-1ರಲ್ಲಿ ಸೇರಿಸಲಾಗಿದೆ ಎಂದು ತಿಳಿಸಿದರು.

ಈ ಭಾಗದ ಪ್ರಮುಖ ಬೆಳೆ ತೊಗರಿಯನ್ನು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಖರೀದಿಸಲು ಜಿಲ್ಲೆಯಾದ್ಯಂತ 184 ತೊಗರಿಖರೀದಿ ಕೇಂದ್ರ ಸ್ಥಾಪಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸಮ್ಮಾನ್” ಯೋಜನೆಯಡಿ ಕೇಂದ್ರ ಸರ್ಕಾರದ ರೂ.6,000 ಜೊತೆಗೆ ರಾಜ್ಯ ಸರ್ಕಾರದ 4,000 ರೂ. ಪ್ರೋತ್ಸಾಹಧನ ನೀಡುವ ಯೋಜನೆಯಡಿ ಜಿಲ್ಲೆಯಲ್ಲಿ 2.85 ಲಕ್ಷ ರೈತರು ನೋಂದಣಿಯಾಗಿದ್ದು, 2019-20ನೇ ಸಾಲಿನಿಂದ ಇಲ್ಲಿಯವರೆಗೆ 2.68 ಲಕ್ಷ ರೈತರಿಗೆ ರೂ.528.79 ಕೋಟಿ ಆರ್ಥಿಕ ನೆರವು ನೀಡಲಾಗಿದೆ ಎಂದು ತಿಳಿಸಿದರು.

ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ, ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ, ಬಸವರಾಜ ಮತ್ತಿಮಡು, ಡಾ. ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ,ಶಶಿಕಲಾ,ಚಂದು ಪಾಟೀಲ, ದಯಾಘನ್ ಧಾರವಾಡಕರ್, ಹರ್ಷವರ್ಧನ್, ಲಿಂಗಾರೆಡ್ಡಿ ಬಾಸರೆಡ್ಡಿ, ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!