ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಕನ್ನಡಿಗರ ಜೀವಕ್ಕೆ ಗ್ಯಾರಂಟಿ ಇಲ್ಲ. ರಾಜ್ಯದಲ್ಲಿ ಕೊಲೆ, ಹಲ್ಲೆ, ಹಿಂಸಾಚಾರ ಪ್ರಕರಣಗಳು ಹೆಚ್ಚಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆಯಾಗಿದ್ದಾರೆ. ಸಿದ್ದರಾಮಯ್ಯ ಅವರು ಪಕ್ಷದ ಕಾರ್ಯಕರ್ತರಿಗೆ ಮನ್ನಣೆ ನೀಡುತ್ತಿಲ್ಲ ಎಂದು ಹೇಳಿದರು.
ಭಾರತದ ಭವಿಷ್ಯಕ್ಕಾಗಿ ಮತ ಕೇಳುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ ಮೇಲೆ ಹಲ್ಲೆ ನಡೆದಿದೆ. ವಂಟಮೂರಿಯಲ್ಲಿ ಮಹಿಳೆಯನ್ನು ಬಹಿರಂಗವಾಗಿ ಬೆತ್ತಲೆ ಮಾಡಿ ಕೆಟ್ಟದಾಗಿ ನಡೆಸಿಕೊಂಡರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೊಂದು ಕ್ರೂರ ಸರಕಾರ. ಆರೋಪಿ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಸರ್ಕಾರದ ಭರವಸೆಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಜನರಿಗೆ ನೀರು ಮತ್ತು ವಿದ್ಯುತ್ ಖಾತರಿಯಿಲ್ಲ. ತೆರಿಗೆ ಹೆಚ್ಚಾಗಿದೆ. ಸಿದ್ದರಾಮಯ್ಯ ಸರಕಾರ ಮತಾಂಧತೆಯನ್ನು ತನ್ನ ಆಡಳಿತದ ಭಾಗವಾಗಿ ಮಾಡಿಕೊಂಡಿದೆ. ಸರಕಾರ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಮತಾಂಧರು ರಾಜ್ಯವನ್ನು ರಣರಂಗವನ್ನಾಗಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.