ಶೈಕ್ಷಣಿಕ ಪರೀಕ್ಷೆಗಿಂತ ಜೀವನದ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಮುಂದಾಗಿ : ಸಚಿವ ಪ್ರಹ್ಲಾದ್ ಜೋಶಿ

ಹೊಸ ದಿಗಂತ ವರದಿ, ಹುಬ್ಬಳ್ಳಿ:

ವಿದ್ಯಾರ್ಥಿಗಳು ಒತ್ತಡಕ್ಕೊಳಗಾಗದೆ ಸುಲಭವಾಗಿ ಪರೀಕ್ಷೆ ಎದುರಿಸಬೇಕು. ಶೈಕ್ಷಣಿಕ ಪರೀಕ್ಷೆಗಿಂತ ಜೀವನದ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಮುಂದಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಶುಕ್ರವಾರ ದೇಶಪಾಂಡೆ ನಗರದ ಸವಾಯಿ ಗಂಧರ್ವ ಭವನದಲ್ಲಿ ಏರ್ಪಡಿಸಿದ್ದ ಪ್ರಧಾನ ಮಂತ್ರಿಗಳ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿ ಬಳಿಕ ಮಾತನಾಡಿದರು.

ಜೀವನದಲ್ಲಿ ಪ್ರೇರಣೆ ಪಡೆಯಬೇಕು. ವಿದ್ಯಾರ್ಥಿಗಳು ಒಳ್ಳೆಯ ಪ್ರಯತ್ನ ಮಾಡಿ ಜೀವನವನ್ನು ರೂಪಿಸಿಕೊಳ್ಳಬೇಕಾಗಿದೆ. ಪ್ರಧಾನಿಮಂತ್ರಿಗಳ ಮಾತುಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ದೊರೆಯಲಿದೆ. ಜೀವನದಲ್ಲಿ ಜಿಗುಪ್ಸೆ ಹೊಂದದೆ, ಉತ್ಸಾಹದಿಂದ ಮುನ್ನುಗಬೇಕು ಎಂದರು.

ಮಕ್ಕಳ ಪ್ರತಿಭೆ ಒಟ್ಟಾರೆಯಾಗಿ ವಿಕಾಸವಾಗಬೇಕು. ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿದ್ದ ಏಕ್ಸಾಂ ವಾರಿಯರ್ ಪುಸ್ತಕವನ್ನು ಕನ್ನಡಕ್ಕೆ ಭಾಷಾಂತರಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿದೆ. ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ಏಕ್ಸಾಂ ವಾರಿಯರ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ್, ಪಾಲಿಕೆ ಸದಸ್ಯ ಸಂತೋಷ ಚವ್ಹಾಣ, ರೂಪಾ ಶೆಟ್ಟಿ, ವೀರಣ್ಣ ಸವಡಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!