ಹೊಸದಿಗಂತ ವರದಿ, ದಾವಣಗೆರೆ:
ಬರುವ ಲೋಕಸಭಾ ಚುನಾವಣೆಗೆ ಎಲ್ಲರ ಅಭಿಪ್ರಾಯ ಪಡೆದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಎಂಪಿ ಚುನಾವಣೆಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಯಾರಿಗೂ ಟಿಕೆಟ್ ಕೇಳಬೇಡಿ ಎನ್ನಲು ಆಗುವುದಿಲ್ಲ. ಆಯಾ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಮುಖಂಡರು, ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಸಂಸದರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ನೀಡಲಾಗುವುದು. ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರವೇ ಸಿದ್ಧವಾಗಲಿದೆ. ಅದಕ್ಕಾಗಿ ಸಮೀಕ್ಷೆ ನಡೆಯುತ್ತಿದೆ ಎಂದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನಿಗೆ ಲೋಕಸಭಾ ಚುನಾವಣೆ ಟಿಕೆಟ್ ಕೊಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಓರ್ವ ಆಕಾಂಕ್ಷಿಯಾಗಿ ಟಿಕೆಟ್ ಕೇಳುತ್ತಾರೆ. ಎಲ್ಲರ ಅಭಿಪ್ರಾಯ ಪಡೆದು ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ನುಡಿದರು.
ಕಾಗಿನೆಲೆ ಕನಕ ಗುರುಪೀಠ ಹೊಸದುರ್ಗ ಶಾಖಾಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿಯವರ ಬಾಗೂರು ಚನ್ನಕೇಶವ ದೇವಸ್ಥಾನ ಭೇಟಿಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈ ವಿಷಯ ನನಗೆ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಹೇಗೆ ಪ್ರತಿಕ್ರಿಯೆ ನೀಡುವುದು? ಎಂದು ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು.
ಬಿಜೆಪಿ ವರಿಷ್ಠ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಭಾರತರತ್ನ ದೊರೆತಿರುವ ಬಗ್ಗೆ ಪ್ರತಿಕ್ರಿಯಿಸಿ, ಕೊಡಲಿ ಬಿಡಿ. ಬೇಡ ಅಂತಾ ನಾವು ಹೇಳಿಲ್ಲ. ನಾನು ಲಿಂಗೈಕ್ಯ ತುಮಕೂರು ಸಿದ್ಧಗಂಗಾ ಸ್ವಾಮಿಗಳಿಗೆ ಭಾರತರತ್ನ ಕೊಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಆದರೆ ಅದಕ್ಕೆ ಮನ್ನಣೆ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಮಂಜೂರು ಮಾಡಲು ಅಧಿಕಾರಿಗಳು ಸತಾಯಿಸುತ್ತಿದ್ದರೆ ಗುತ್ತಿಗೆದಾರರು ದೂರು ನೀಡಬಹುದು. ತನಿಖೆ ಕೈಗೊಂಡು ಕ್ರಮ ವಹಿಸಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.