ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ನಗರದ ನವನಗರದಲ್ಲಿ ನಡೆದ ಬೀದಿನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಕಳೆದ ಡಿಸೆಂಬರ್ 27 ರಂದು ನವನಗರದ ಸೆಕ್ಟರ್ ನಂ 15ರಲ್ಲಿ ಬಾಲಕಿ ಅಲೈನಾ ಮೇಲೆ ಬೀದಿನಾಯಿಗಳ ಹಿಂಡು ಭೀಕರವಾಗಿ ದಾಳಿ ಮಾಡಿದ್ದವು. ಈ ದಾಳಿಯಲ್ಲಿ ಬಾಲಕಿಯ ಕಣ್ಣು, ಮೂಗು ಹಾಗೂ ಮುಖಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಆಕೆಯನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯ ಸ್ಥಿತಿ ಕ್ಷೀಣಿಸಿದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಸುಮಾರು ಎರಡು ವಾರಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ಬಾಲಕಿ, ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾಳೆ.
ಬಾಲಕಿಯ ಸಾವು ಬಾಗಲಕೋಟೆ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಗರದಲ್ಲಿ ದಿನೇ ದಿನೇ ಬೀದಿನಾಯಿಗಳ ಹಾವಳಿ ಹೆಚ್ಚುತ್ತಿದ್ದರೂ, ಬಾಗಲಕೋಟೆ ನಗರಸಭೆ ಹಾಗೂ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ” ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


