ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ: ಸಿಎಂ ಸಿದ್ದರಾಮಯ್ಯ ನೀಡಿದ್ರು ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ.

ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ ಇನ್ನುಳಿದ ಭಾಗದಲ್ಲಿ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸೋಮವಾರ ಸಭೆ ನಡೆಸಿದ್ದಾರೆ.

ಈ ವೇಳೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನ ಮಾಡಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಟಿಕ ಆಹಾರ ನೀಡುವು ನಮ್ಮ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನ ಮಾಡಲಾಗಿದೆ. ಜತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಹೇಳಿದರು.

ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!