ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ವರದಿ, ಶಿವಮೊಗ್ಗ:
ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ವಿವಿಧ ವರ್ಗಗಳ ಜನರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಬಿಡುಗಡೆ ಮಾಡಲಾಗುತ್ತಿದ್ದು, ಇದನ್ನು ಬ್ಯಾಂಕುಗಳು ಹಳೆ ಸಾಲಕ್ಕೆ ಮುರಿದುಕೊಳ್ಳದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶುಕ್ರವಾರ ಶಿಕಾರಿಪುರದಲ್ಲಿ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇದನ್ನು ಉಲ್ಲಂಘಿಸುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ. ಯಾವ ಉದ್ದೇಶಕ್ಕೆ ಸರ್ಕಾರ ಹಣ ನೀಡಿದೆಯೋ ಆ ಉದ್ದೇಶಕ್ಕೆ ಬಳಕೆಯಾಗುವಂತೆ ಬ್ಯಾಂಕ್ ಗಳು ಹಣ ನೀಡಬೇಕೆಂದು ಹೇಳಿದರು.
ಮುಂದಿನ ಎರಡು ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದೆ.ಎಲ್ಲರಿಗೂ ಉಚಿತವಾಗಿಯೇ ಲಸಿಕೆ ನೀಡಲು ಕೇಂದ್ರ ಮುಂದಾಗಿದ್ದು, ಅದರಂತೆ ಲಸಿಕೆ ನೀಡಲಾಗುತ್ತದೆ ಎಂದರು.
ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕಡಿಮೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯೂ ಕರೋನಾ ಪ್ರಮಾಣ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ಸೋಂಕು ಕಡಿಮೆಯಾಗದ ಹೊರತು ಲಾಕ್ ಡೌನ್ ಸಡಿಲಿಕೆ ಕಷ್ಟವಾಗಲಿದೆ ಎಂದರು.
ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಲೋಕಸಭಾ ಸದಸ್ಯ ಬಿ. ವೈ. ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ , ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸಾದ್, ಸಿಇಒ ವೈಶಾಲಿ ಮತ್ತಿತರರು ಉಪಸ್ಥಿತರಿದ್ದರು.