ಹೊಸದಿಗಂತ ವರದಿ,ಮಡಿಕೇರಿ:
ಲೋಕಸಭಾ ಸಾರ್ವತ್ರಿಕ ಚುನಾವಣೆ ಮತ ಎಣಿಕೆ ಜೂ.4 ರಂದು ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಸೆಕ್ಷನ್ 144 ಮತ್ತು 144(ಎ) ಹಾಗೂ ಕರ್ನಾಟಕ ಪೊಲೀಸ್ ಆಕ್ಟ್ 1963 ರ ಕಲಂ 35 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಪ್ರತಿಭಟನೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.