ಕೆ.ಆರ್. ಪುರ ತಹಶೀಲ್ದಾರ್ ಅಜಿತ್ ಕುಮಾರ್ ರೈ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್. ಪುರ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.

ಅಜಿತ್​ಗೆ ಸಂಬಂಧಿಸಿದ 12 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ ಶೋಧ ನಡೆಸಿ ಲಭ್ಯವಾದ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದರು. ಈ ವೇಳೆ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಮಾಡಿರುವುದು ಕಂಡು ಬಂದ ಹಿನ್ನೆಲೆ ಅಜಿತ್ ರೈ ಅವರನ್ನು ಬಂಧಿಸಲಾಗಿದ್ದು, 24 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಲಾಗಿದೆ.

ದಾಳಿ ನಡೆದ ವೇಳೆ ಲೋಕಾಯುಕ್ತ ಪೊಲೀಸರು 40 ಲಕ್ಷ ನಗದು, 700 ಗ್ರಾಂ ಚಿನ್ನ, 1.90 ಕೋಟಿ ಮೌಲ್ಯದ ವಸ್ತುಗಳು, ಐಷಾರಾಮಿ ಕಾರು ಮತ್ತು ಬೈಕ್​ಗಳನ್ನು ವಶಕ್ಕೆ ಪಡೆದಿದ್ದರು. 4 ಥಾರ್ ಕಾರ್, 4 ಫಾರ್ಚೂನರ್ ಕಾರ್, 3 ರಾಯಲ್ ಎನ್‌ಫೀಲ್ಡ್, 1 ಲ್ಯಾಂಡ್ ಕ್ರೂಸರ್ (2.5 ಕೋಟಿ ಮೌಲ್ಯ) ಹೊಂದಿದ್ದು, ಎಲ್ಲ ಕಾರಿಗೂ ಒಂದೇ ನಂಬರ್ ರಿಜಿಸ್ಟರ್ ಇದೆ. ಆದರೆ ಇದ್ಯಾವುದಕ್ಕೂ ಅಜಿತ್​ ರೈ ಲೆಕ್ಕ ಕೊಡುತ್ತಿಲ್ಲ ಎನ್ನಲಾಗಿದೆ.

ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಲಭ್ಯವಾಗಿವೆ. ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಬೇನಾಮಿ ಹೆಸರಿನಲ್ಲಿ ಅಜಿತ್​ ರೈ ಆಸ್ತಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಘಟಕದ ಎಸ್ಪಿ ಕೆ.ವಿ ಅಶೋಕ್‌ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!