ಹೊಸದಿಗಂತ ಹುಬ್ಬಳ್ಳಿ:
ಕರ್ನಾಟಕ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕಿಮ್ಸ್) ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ಸಿಗಬೇಕಾದ ಔಷಧಿಗಳನ್ನು ಹೊರಗಡೆ ಬರೆದುಕೊಡಲಾಗುತ್ತಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಇಂದು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ವ್ಯಕ್ತಿಯೊಬ್ಬರು ಇಂಜೆಕ್ಷನ್‌ಗಾಗಿ ಆಸ್ಪತ್ರೆಯಲ್ಲಿ ಪರದಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ದೃಶ್ಯಗಳನ್ನು ಗಮನಿಸಿದ್ದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಎಸ್.ಟಿ. ಅವರ ನೇತೃತ್ವದ ತಂಡ ಕಾರ್ಯಾಚರಣೆಗೆ ಇಳಿದಿದೆ.
ಲೋಕಾಯುಕ್ತ ತಂಡವು ಆಸ್ಪತ್ರೆಯ ಪ್ರತಿಯೊಂದು ವಿಭಾಗಗಳಿಗೆ ಭೇಟಿ ನೀಡಿ ರೋಗಿಗಳ ವಿಚಾರಣೆ ನಡೆಸಿತು. ಔಷಧ ಸಂಗ್ರಹಣೆ ಮತ್ತು ವಿತರಣಾ ರಿಜಿಸ್ಟರ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ.
ಆಸ್ಪತ್ರೆಯಲ್ಲಿನ ಲೋಪದೋಷಗಳ ಕುರಿತು ಪ್ರಾಥಮಿಕ ವರದಿ ಸಿದ್ಧಪಡಿಸಿ ಹಿರಿಯ ಅಧಿಕಾರಿಗಳಿಗೆ ಸಲ್ಲಿಸಲು ತಂಡ ಮುಂದಾಗಿದೆ.

