November 16, 2026
Monday, November 16, 2026
spot_img

ತೋಟಕ್ಕೆ ತೆರಳುತ್ತಿದ್ದ ರೈತನನ್ನು ತುಳಿದು ಕೊಂದ ಒಂಟಿ ಆನೆ : ನ್ಯಾಯಕ್ಕಾಗಿ ಗ್ರಾಮಸ್ಥರ ಪ್ರತಿಭಟನೆ

ಹೊಸದಿಗಂತ ವರದಿ ಬೇಲೂರು:

ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮತ್ತೊಂದು ಅಮಾಯಕ ಜೀವ ಕಾಡಾನೆ ದಾಳಿಗೆ ಬಲಿಯಾಗಿದೆ. ಅರೇಹಳ್ಳಿ ಹೋಬಳಿಯ ನಾಗೇನಹಳ್ಳಿ ಹಿರೇ ಅಸಡ್ಡೆ ಗ್ರಾಮದ ತೋಟದ ಮಾಲೀಕ ರೆಹಮಾನ್ (ಬಾಬು), ಸುಮಾರು 45 ವರ್ಷ, ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ತಮ್ಮ ತೋಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಒಂಟಿ ಕಾಡಾನೆಯೊಂದು ದಾಳಿ ನಡೆಸಿ ತುಳಿದು ಕೊಂದಿದೆ.

ಬೆಳಗಿನ ಜಾವ ತೋಟದ ಕೆಲಸಕ್ಕೆ ತೆರಳುತ್ತಿದ್ದ ರೆಹಮಾನ್ ಅವರಿಗೆ ಎದುರಾದ ಒಂಟಿ ಆನೆ ಏಕಾಏಕಿ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹವನ್ನು ಬೇಲೂರು ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದ್ದು, ಆಸ್ಪತ್ರೆಯ ಮುಂಭಾಗದಲ್ಲಿ ಮೃತರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನಲ್ಲಿ ಪದೇಪದೇ ಕಾಡಾನೆ ದಾಳಿಯಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದರೂ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ವಿಳಂಬವಾಗುತ್ತಿದೆ. ಇನ್ನೆಷ್ಟು ಜನರ ಪ್ರಾಣ ಹೋದರೆ ಸರ್ಕಾರ ಮತ್ತು ಅರಣ್ಯ ಇಲಾಖೆ ಎಚ್ಚೆತ್ತುಕೊಳ್ಳುತ್ತದೆ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ, ಕಾಡಾನೆಗಳ ನಿರಂತರ ದಾಳಿಯನ್ನು ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕು. ಜನವಸತಿ ಪ್ರದೇಶ ಹಾಗೂ ರೈತರ ತೋಟಗಳಿಗೆ ಕಾಡಾನೆಗಳು ನುಗ್ಗದಂತೆ ಪರಿಣಾಮಕಾರಿ ಯೋಜನೆ ರೂಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾಡಾನೆಗಳ ಹಾವಳಿಯಿಂದ ರೈತರು ಜೀವಭಯದಲ್ಲೇ ಕೃಷಿ ಚಟುವಟಿಕೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂತಹ ದುರಂತಗಳು ಮರುಕಳಿಸದಂತೆ ಸರ್ಕಾರ ತಕ್ಷಣವೇ ಗಂಭೀರ ಕ್ರಮ ಕೈಗೊಳ್ಳಬೇಕೆಂಬುದು ಗ್ರಾಮಸ್ಥರ ಆಗ್ರಹವಾಗಿದೆ.

Must Read