ಹೊಸದಿಗಂತ ಡಿಜಿಟಲ್ ಡೆಸ್ಕ್:
ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯು ಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಯ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮಂಡ್ಯ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಮಂಗಳವಾರವೂ ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.