ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ದೂರು ಗಲಭೆಗೆ ಪೊಲೀಸ್ ಇಲಾಖೆಯ ಸಂಪೂರ್ಣ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಘಟನೆ ಸಂಬಂಧಿಸಿ ಸತ್ಯ ಸಂಶೋಧನಾ ತಂಡವನ್ನು ನಾವು ಈಗಾಗಲೇ ಪ್ರಕಟಿಸಿದ್ದೇವೆ. ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ತಂಡ ರಚಿಸಿದ್ದೇವೆ. ಸತ್ಯಾಸತ್ಯತೆ ಪರಿಶೀಲಿಸಿ ವರದಿ ಕೊಡಲು ತಿಳಿಸಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಒಂದು ರೀತಿ ತುಘಲಕ್ ದರ್ಬಾರ್ ಇದೆ. ಇವರು ನಿಜಾಮರ ಆಡಳಿತವನ್ನು ನೆನಪು ಮಾಡಿ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು, ಗೃಹ ಸಚಿವರು ತಮ್ಮ ಧೋರಣೆ ಸರಿಪಡಿಸಿಕೊಳ್ಳದಿದ್ದರೆ ಖಂಡಿತವಾಗಿ ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಇದಕ್ಕೆ ರಾಜ್ಯ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.
ನಾಳೆ (ಸೆ.10) ಬೆಳಿಗ್ಗೆ 10, 10.30ಕ್ಕೆ ನಾನು, ನಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಪಕ್ಷದ ಇತರ ಮುಖಂಡರು ಮದ್ದೂರಿಗೆ ಭೇಟಿ ಕೊಡಲಿದ್ದೇವೆ ಎಂದು ಅವರು ಹೇಳಿದರು.