ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸರ್ಕಾರದ ಧೋರಣೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ನೋಡಿದರೆ “ಮೊಘಲ್ ಪ್ರೇರಣೆಯ ಆಡಳಿತ ನಡೆಯುತ್ತಿರುವಂತಿದೆ” ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಜಯೇಂದ್ರ ಅವರ ಪ್ರಕಾರ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದು ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವ ಪರಿಸ್ಥಿತಿಯೇ ಇಲ್ಲದಂತಾಗಿದೆ. ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಗುಂಪುಗೂಡಿದ ಮತಾಂಧ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸರ್ಕಾರದ ಮೃದು ನಿಲುವಿನ ಪ್ರತಿಬಿಂಬವಾಗಿದೆ. ಈ ರೀತಿಯ ಪಕ್ಷಪಾತಿ ಧೋರಣೆ ರಾಜ್ಯದಲ್ಲಿ ಅರಾಜಕತೆ ಹೆಚ್ಚಲು ಕಾರಣವಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು, ಕೆಲ ಮಹಿಳೆಯರು ಹಾಗೂ ಪೊಲೀಸರಿಗೆ ತೀವ್ರವಾಗಿ ಗಾಯಗಳಾಗಿವೆ. ಇಂತಹ ಪರಿಸ್ಥಿತಿ ಅತ್ಯಂತ ಆತಂಕಕಾರಿ ಎಂದು ವಿಜಯೇಂದ್ರ ಹೇಳಿದ್ದಾರೆ. ಅವರು ಈ ಹಿಂದೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗಣಪತಿ ಮೂರ್ತಿಯನ್ನು ಮಲಿನಗೊಳಿಸಿದ ಘಟನೆ ಹಾಗೂ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ವರದಿಯಾದ ಅನಾಹುತಗಳನ್ನು ಉಲ್ಲೇಖಿಸಿ, ಇವು ಸರ್ಕಾರದ ವಿಫಲತೆಯನ್ನು ಬಯಲಿಗೆಳೆಯುತ್ತವೆ ಎಂದು ವಾದಿಸಿದರು.
ಅಲ್ಪಸಂಖ್ಯಾತರ ಹೆಸರಿನಲ್ಲಿ ನಡೆಯುತ್ತಿರುವ ಕಿಡಿಗೇಡಿತನ ಹಿಂದು ಸಮುದಾಯದಲ್ಲಿ ಭಯಗ್ರಸ್ತ ವಾತಾವರಣವನ್ನು ಉಂಟುಮಾಡಿದೆ. ಆದರೆ, ಸರ್ಕಾರ ಪೊಲೀಸರ ಕೈಗಳನ್ನು ಕಟ್ಟಿ ಹಾಕಿರುವುದರಿಂದ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ವಿಜಯೇಂದ್ರ ಆರೋಪಿಸಿದರು. ಪೊಲೀಸರ ಮೇಲೆ ದಾಳಿ ನಡೆದರೂ ಕಠಿಣ ಕ್ರಮ ಕೈಗೊಳ್ಳದಿರುವುದು ಗಂಭೀರ ಸಂಗತಿ ಎಂದು ಅವರು ಎಚ್ಚರಿಕೆ ನೀಡಿದರು.