ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ದೂರಮ್ಮ ಜಾತ್ರಾ ಮಹೋತ್ಸವದಲ್ಲಿ ತೇರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಂದಾಯ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಪ್ರಶಾಂತ್ ಹಾಗೂ ಗ್ರಾಮ ಆಡಳಿತಾಧಿಕಾರಿ ಡಿ. ಕಾರ್ತಿಕ್ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.
ಆನೇಕಲ್ ತಾಲ್ಲೂಕು ಹುಸ್ಕೂರು ಗ್ರಾಮದಲ್ಲಿ ಮಾರ್ಚ್ 22ರಂದು ನಡೆದ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವದ ತೇರು ಬಿದ್ದು ಇಬ್ಬರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದರು.
ಘಟನೆಯ ನಂತರ, ಸಂಬಂಧಪಟ್ಟ ತಹಶೀಲ್ದಾರ್ ಅವರನ್ನು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು.
ತಹಶೀಲ್ದಾರ್ ಇಬ್ಬರು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ಕೆಲವು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದ್ದರು.