ಮಡಿಕೇರಿ-ಮಂಗಳೂರು ರಸ್ತೆ: ಮರಳು ಮೂಟೆ ಅಳವಡಿಸಿ ಲಘು ವಾಹನ ಸಂಚಾರಕ್ಕೆ ಅವಕಾಶ

ಹೊಸದಿಗಂತ ವರದಿ,ಮಡಿಕೇರಿ:

ಮಡಿಕೇರಿ-ಮಂಗಳೂರು ರಸ್ತೆಯ ಜಿಲ್ಲಾಡಳಿತ ಭವನ ಬಳಿ ತಡೆಗೋಡೆಯ ಸ್ಲ್ಯಾಬ್‍ಗಳು ಹೊರಚಾಚಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. ಸದ್ಯ ಮರಳು ಮೂಟೆ ಅಳವಡಿಸಿದ ನಂತರ ಲಘು ವಾಹನ (ದ್ವಿಚಕ್ರ, ಆಟೋ) ಸಂಚಾರಕ್ಕೆ ಅವಕಾಶ ಮಾಡಲಾಗುವುದು. ಆ ನಿಟ್ಟಿನಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿ ಜತೆ ಚರ್ಚಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದರು.
ಜಿಲ್ಲಾಡಳಿತ ಭವನ ಬಳಿಯ ಮಂಗಳೂರು ರಸ್ತೆ ತಡೆಗೋಡೆ ವೀಕ್ಷಿಸಿದ ಬಳಿಕ, ಮದೆನಾಡು ಸಮೀಪದ ಸೀಮೆಹುಲ್ಲು ಕಜೆ ಗುಡ್ಡದ ಬದಿಯೊಂದು ಕುಸಿದಿರುವ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದ ನಂತರ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ತಡೆಗೋಡೆ ಪರಿಶೀಲನೆ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು, ರಸ್ತೆ ಮುಚ್ಚಿರುವುದರಿಂದ 11 ಕಿ.ಮೀ ಬಳಸಿಕೊಂಡು ಬರಬೇಕಿದೆ. ಆದ್ದರಿಂದ ಕೂಡಲೇ ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ತಡೆಗೋಡೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಜೊತೆಗೆ ಜಿಲ್ಲಾಧಿಕಾರಿ ಅವರ ಕಚೇರಿಗೆ ತೆರಳಲು ರಸ್ತೆ ಮಾಡಿದ್ದರ ಪರಿಣಾಮವಾಗಿ ಇಂತಹ ದುಸ್ಥಿತಿ ಎದುರಿಸುವಂತಾಗಿದೆ ಎಂದು ಸ್ಥಳೀಯರೊಬ್ಬರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು, ಸಾರ್ವಜನಿಕರಿಗೆ ತೊಂದರೆ ಆಗದಂತೆ ಗಮನಹರಿಸಲಾಗುವುದು. ಸದ್ಯ ಮರಳು ಮೂಟೆ ಅಳವಡಿಸುವ ಕಾರ್ಯ ನಡೆಯುತ್ತಿದ್ದು, ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು ಎಂದರು.
ಲೋಕೋಪಯೋಗಿ ಇಲಾಖೆ ಇಇ ನಾಗರಾಜು ಅವರು ತಡೆಗೋಡೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಡಿವೈಎಸ್‍ಪಿ ಗಜೇಂದ್ರ ಪ್ರಸಾದ್, ತಹಶಿಲ್ದಾರ್ ಮಹೇಶ್ ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!