ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಚಿನ್ನದ ಸರಗಳು, ಮೊಬೈಲ್ ಫೋನ್ಗಳು ಮತ್ತು ವ್ಯಾಲೆಟ್ಗಳನ್ನು ಎಗರಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ಡಿಸೆಂಬರ್ 5ರಂದು ನಡೆದ ‘ಮಹಾಯುತಿ’ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಜನರ ಚಿನ್ನ, ಮೊಬೈಲ್ ಮತ್ತು 12 ಲಕ್ಷ ರೂಪಾಯಿ ಮೌಲ್ಯದ ನಗದು ಕಳ್ಳತನವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಕಳ್ಳರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ. ಈವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಆಜಾದ್ ಮೈದಾನ್ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದರು.
ಮೈದಾನದ ಗೇಟ್ ನಂಬರ್ 2ರಲ್ಲಿ ಕಳ್ಳತನ ನಡೆದಿವೆ. ಸಿಸಿಟಿವಿ ದ್ಯಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಚಿನ್ನ, ಮೊಬೈಲ್, ವಾಲೆಟ್ ಕಳೆದುಕೊಂಡವರು ದೂರು ನೀಡಿದ್ದಾರೆ. ಆರೋಪಿಗಳನ್ನು ಹಿಡಿದು ವಸ್ತುಗಳನ್ನು ಮಾಲೀಕರಿಗೆ ಮರಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಕ್ರಮದ ಭದ್ರತೆಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಮೈದಾನದ ಸುತ್ತಲೂ ಸಿಸಿಟಿವಿ ನಿಗಾ ಇಡಲಾಗಿತ್ತು. ಆದಾಗ್ಯೂ ಕಳ್ಳರು ಕರಾಮತ್ತು ತೋರಿಸಿದ್ದಾರೆ.