ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ದೇವೇಂದ್ರ ಫಡ್ನವೀಸ್ ಸರ್ಕಾರ ಇಂದು ತ್ರಿಭಾಷಾ ಸೂತ್ರವನ್ನು ರದ್ದುಗೊಳಿಸಿದೆ.
ಮೂರನೇ ಭಾಷೆಯಾಗಿ ಹಿಂದಿ ‘ಹೇರಿಕೆ’ ಆರೋಪಗಳ ನಡುವೆ ಹೆಚ್ಚುತ್ತಿರುವ ವಿರೋಧದಿಂದಾಗಿ ಸರ್ಕಾರ ಈ ಕ್ರಮಕೈಗೊಂಡಿದೆ. ಇದರೊಂದಿಗೆ ಈ ನೀತಿಯನ್ನು ಪರಿಶೀಲಿಸಲು ಮತ್ತು ಕಾರ್ಯಗತಗೊಳಿಸಲು ಸರ್ಕಾರ ಹೊಸ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ತ್ರಿಭಾಷಾ ನೀತಿ ಮತ್ತು ಅದರ ಅನುಷ್ಠಾನ ವಿಧಾನದ ಕುರಿತು ಡಾ. ನರೇಂದ್ರ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಅವರು ಹೇಳಿದರು. ಈ ಸಮಿತಿಯ ವರದಿ ಬಂದ ನಂತರವೇ ನೀತಿಯನ್ನು ಜಾರಿಗೆ ತರಲಾಗುವುದು ಎಂದರು.
ಸಮಿತಿಯ ಶಿಫಾರಸುಗಳು ಬರುವವರೆಗೆ, ತ್ರಿಭಾಷಾ ನೀತಿಗೆ ಸಂಬಂಧಿಸಿದ ಎರಡೂ GR ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಸಿಎಂ ಫಡ್ನವೀಸ್ ಸ್ಪಷ್ಟಪಡಿಸಿದ್ದಾರೆ. ಮರಾಠಿ ಭಾಷೆ ನಮಗೆ ಕೇಂದ್ರಬಿಂದುವಾಗಿದೆ ಎಂದು ಅವರು ಹೇಳಿದರು.
ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಲಿಸಲಾಗುವುದು ಎಂದು ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿತ್ತು. ಈ ನಿರ್ಧಾರವು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅಡಿಯಲ್ಲಿ ಪ್ರಾಥಮಿಕ ಹಂತದಲ್ಲಿ ಹಂತಹಂತವಾಗಿ ಅನುಷ್ಠಾನಗೊಳಿಸುವ ಭಾಗವಾಗಿತ್ತು. ಆದಾಗ್ಯೂ, ಒಂದು ತರಗತಿಯಲ್ಲಿ ಕನಿಷ್ಠ 20 ವಿದ್ಯಾರ್ಥಿಗಳು ಹಿಂದಿ ಬದಲಿಗೆ ಬೇರೆ ಯಾವುದೇ ಭಾರತೀಯ ಭಾಷೆಯನ್ನು ಆಯ್ಕೆ ಮಾಡಲು ಬಯಸಿದರೆ, ಶಾಲೆಯು ಆ ಭಾಷೆಯ ಶಿಕ್ಷಕರನ್ನು ವ್ಯವಸ್ಥೆ ಮಾಡಬೇಕಾಗುತ್ತದೆ ಅಥವಾ ಆ ವಿಷಯವನ್ನು ಆನ್‌ಲೈನ್‌ನಲ್ಲಿ ಕಲಿಸಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಮಹಾರಾಷ್ಟ್ರ ಸರ್ಕಾರದ ಈ ನಡೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿದವು. ಸರ್ಕಾರವು ಪ್ರಾದೇಶಿಕ ಭಾಷೆಗಳನ್ನು ನಿರ್ಲಕ್ಷಿಸುವ ಮೂಲಕ ಹಿಂದಿಯನ್ನು ಉತ್ತೇಜಿಸುತ್ತಿದೆ. ಇದು ರಾಜ್ಯದ ಭಾಷಾ ವೈವಿಧ್ಯತೆ ಮತ್ತು ಮರಾಠಿ ಗುರುತಿಗೆ ಹಾನಿ ಮಾಡುತ್ತದೆ ಎಂದು ಅವರು ಆರೋಪಿಸಿದರು.