ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್ ವಿಧಾನಸಭಾ ಚುನಾವಣೆ ರಾಯಭಾರಿಯಾಗಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಯವರನ್ನು ಭಾರತೀಯ ಚುನಾವಣಾ ಆಯೋಗ ಆಯ್ಕೆ ಮಾಡಿದೆ.
ನ.13 ಹಾಗೂ ನ.20ರಂದು ಎರಡು ಹಂತಗಳಲ್ಲಿ ನಡೆಯಲಿರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ.
ಜಾರ್ಖಂಡ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಕೆ.ರವಿಕುಮಾರ್ ಮಾತನಾಡಿ, ವಿಧಾನಸಭಾ ಚುನಾವಣೆಗೆ ಧೋನಿ ತಮ್ಮ ಫೋಟೋವನ್ನು ಬಳಸಲು ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ. ಜೊತೆಗೆ ಇನ್ಯಾವುದೇ ವಿವರ ಬೇಕಾದಲ್ಲಿ ಅವರ ಒಪ್ಪಿಗೆಯ ಮೇರೆಗೆ ತೆಗೆದುಕೊಳ್ಳಲಾಗುವುದು. SWEEP (ಸಿಸ್ಟಮ್ಯಾಟಿಕ್ ವೋಟರ್ಸ್ ಎಜುಕೇಶನ್ ಮತ್ತು ಎಲೆಕ್ಟೋರಲ್ ಪಾರ್ಟಿಸಿಪೇಷನ್) ಕಾರ್ಯಕ್ರಮದ ಅಡಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಧೋನಿ ಭಾಗಿಯಾಗಲಿದ್ದಾರೆ. ವಿಶೇಷವಾಗಿ ಮತದಾರರಲ್ಲಿ ಮತ ಚಲಾಯಿಸುವಂತೆ ಪ್ರೋತ್ಸಾಹಿಸುತ್ತಾರೆ ಎಂದು ಚುನಾವಣಾ ಆಯೋಗ ಆಶಿಸುತ್ತದೆ ಎಂದರು.