ಹೊಸದಿಗಂತ, ಮಂಗಳೂರು:
ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿ, ಅವರಿಂದ ಬರೋಬ್ಬರಿ 24 ಲಕ್ಷ ರೂ. ಮೌಲ್ಯದ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಉಳ್ಳಾಲದ ಮುಡಿಪುವಿನ ಕೈರಂಗಳ ಗ್ರಾಮ ನಿವಾಸಿ ನವಾಜ್ ಯಾನೆ ನವ್ವಾ ಯಾನೆ ಮುಡಿಪು ನವಾಜ್ (35), ಉಳ್ಳಾಲದ ಮುಡಿಪುವಿನ ಕೈರಂಗಳ ನಿವಾಸಿ ಮೊಹಮ್ಮದ್ ಆರೀಫ್ ಎನ್. (36) ಹಾಗೂ ಉಳ್ಳಾಲದ ಮುಡಿಪುವಿನ ಕೈರಂಗಳ ನಿವಾಸಿ ಲಾಯ್ಡ್ ಡಿಸೊಜಾ (35) ಎಂದು ಗುರುತಿಸಲಾಗಿದೆ.
ಆರೋಪಿಗಳು ಬೆಂಗಳೂರು ನಗರದಿಂದ ಈ ನಿಷೇಧಿತ ಮಾದಕ ವಸ್ತುವನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಉಳ್ಳಾಲ ತಾಲೂಕಿನ ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಇವರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 24 ಲಕ್ಷ ರೂ. ಮೌಲ್ಯದ 240 ಗ್ರಾಂ ಎಂಡಿಎಂಎ, 4 ಮೊಬೈಲ್ ಫೋನ್, ಮಾದಕ ವಸ್ತು ಸಾಗಾಟಕ್ಕೆ ಬಳಸಿದ ಟೆಂಪೋ ವಾಹನ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 29,80,000 ರೂ. ಆಗಿದೆ.
ಆರೋಪಿ ಪೌಕಿ ನವಾಜ್ ಯಾನೆ ನವ್ವಾ ಯಾನೆ ಮುಡಿಪು ನವಾಜ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಮೋಸ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 16 ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 02 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ದಾಖಲಾಗಿವೆ. ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆ ಮತ್ತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ತಲಾ ಎರಡು ಪ್ರಕರಣ ಸೇರಿದಂತೆ ಒಟ್ಟು 04 ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಾದಕವಸ್ತು ಮಾರಾಟ, ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.



