ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕ್ಕಳಿಗೆ ಸಾಮಾಜಿಕ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ವಿಶ್ವ ವಿದ್ಯಾಲಯಗಳು ಉನ್ನತ ಶಿಕ್ಷಣವನ್ನು, ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಜೊತೆಗೆ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಮೂಡಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ (Siddaramaiah) ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡಿ, ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು. ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ ಎಂದು ತಿಳಿಸಿದರು.
ಅಧ್ಯಯನ ಮತ್ತು ಸಂಶೋಧನೆಗಳು ಗ್ರಂಥಾಲಯಗಳಲ್ಲಿ ಕೊಳೆಯಬಾರದು. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯ ಜೊತೆ ರಾಜಿ ಮಾಡಿಕೊಂಡು ಹೋಗುವುದಾದರೆ ಅದು ಶಿಕ್ಷಣವೇ ಅಲ್ಲ. ಒಬ್ಬ ವ್ಯಕ್ತಿ ವಿವಿಯಿಂದ ಹೊರಗೆ ಬಂದ ಮೇಲೆ ಸಮಾಜದ ಜವಾಬ್ದಾರಿ ಹೊರುವ ಶಕ್ತಿ ಇರಬೇಕು. ಅಂತಹ ಜ್ಞಾನ ಬರಬೇಕು ಎಂದರು.
ಸಂವಿಧಾನಕ್ಕೆ ವಿರುದ್ಧವಾದ ಚಟುವಟಿಕೆ ಮತ್ತು ಕ್ರಮಗಳು ವಿವಿಗಳಲ್ಲಿ ನಡೆಯಬಾರದು. ವಿವಿಗಳಿಂದ ಬಂದವರು ಮತ್ತೆ ಮೌಢ್ಯಗಳು, ಜಾತಿಯ ಜೊತೆಯಲ್ಲಿದ್ದರೆ ಅವರು ಪಡೆದಿರುವುದು ಶಿಕ್ಷಣ ಎಂದು ಕರೆಯಲಾಗದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಢ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು.
ಕೆಲವೊಮ್ಮೆ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ನಡೆಸಿರುವುದನ್ನು ಕೆಲವು ವಿವಿಗಳಲ್ಲಿ ನೋಡಿದ್ದೇನೆ. ಜಾತ್ಯತೀತ ವಿರೋಧಿ ಮನೋಭಾವವನ್ನು ಪುರಸ್ಕರಿಸಬಾರದು. ಹಾಗೆ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತದೆ.ಯಾವುದೇ ಕಾರಣಕ್ಕೆ ಅಂತಹ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಇಲ್ಲವಾದರೆ ಉನ್ನತ ಶಿಕ್ಷಣ ಸರಿದಾರಿಯಲ್ಲಿ ಸಾಗದೆ ಹೋದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ, ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸುವ ವಾತಾವರಣ ನಿರ್ಮಿಸಬೇಕು ಎಂದರು.