ಅಧಿಕೃತವಾಗಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರ ರಾಜಧಾನಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರು ಉನ್ನತ ಹುದ್ದೆಗೆ ಆಯ್ಕೆಯಾದ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ನಾಯಕರು ಮತ್ತು ಸಂಸದರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಖರ್ಗೆ ಇಂದು ಬೆಳಗ್ಗೆ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಲ್ಲೆ ನಮನ ಸಲ್ಲಿಸಿದರು. ಜೊತೆಗೆ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೆ ಭೇಟಿ ನೀಡಿದರು.

80 ವರ್ಷದ ಖರ್ಗೆ ಅವರು ಶಶಿ ತರೂರ್ ವಿರುದ್ಧ 7,897 ಮತಗಳನ್ನು ಪಡೆದು ಕಾಂಗ್ರೆಸ್‌ ಅಧ್ಯಕ್ಷರ ಪದವಿ ಸ್ವೀಕರಿಸಿದರು.
ತಳಮಟ್ಟದಿಂದ ಬೆಳೆದು ಬಂದ ನಾಯಕ, 1968 ರಲ್ಲಿ ಎಸ್ ನಿಜಲಿಂಗಪ್ಪ ಅವರು ಕಾಂಗ್ರೆಸ್ ಅಧ್ಯಕ್ಷರಾದ ನಂತರ ಪಕ್ಷದ ಉನ್ನತ ಹುದ್ದೆಯನ್ನು ಅಲಂಕರಿಸಿದ ಕರ್ನಾಟಕದ ಎರಡನೇ ನಾಯಕರಾಗಿದ್ದಾರೆ.

ಸಕ್ರಿಯ ರಾಜಕಾರಣದಲ್ಲಿ ಐದು ದಶಕಗಳ ಅನುಭವದಲ್ಲಿ, ಖರ್ಗೆ ಅವರು ಕೇಂದ್ರ ಸಚಿವರಾಗಿ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕರಾಗಿದ್ದಾರೆ ಮತ್ತು ಕರ್ನಾಟಕದಲ್ಲಿ ಒಂಭತ್ತು ಬಾರಿ ಶಾಸಕರಾಗಿ, ಹಲವಾರು ಖಾತೆಗಳನ್ನು ನಿರ್ವಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!