ಹೊಸದಿಗಂತ ವರದಿ, ಬಾಗಲಕೋಟೆ:
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆಯವರು ಆಯ್ಕೆಯಾಗಿದ್ದು ಇವರ ನೇತೃತ್ವದಲ್ಲಿ ರಾಜ್ಯ ಹಾಗೂ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ಬಲಶಾಲಿಯಾಗಲಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ಮಾಜಿ ನಾಯಕ ಎಸ್.ಆರ್.ಪಾಟೀಲ ಬಣ್ಣಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಯವರು ಎಐಸಿಸಿ ಅಧ್ಯಕ್ಷರಾಗಿದ್ದು ಅವರ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ. ಮಲ್ಲಿಕಾರ್ಜುನ ಖರ್ಗೆ ಯವರು ಮಾಜಿ ಮುಖ್ಯಮಂತ್ರಿ ದಿ.ಎಸ್.ನಿಜಲಿಂಗಪ್ಪನವರ ನಂತರ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದ ಎರಡನೇ ಕನ್ನಡಿಗರ ಎಂಬ ಬಿರುದಾಂಕಿತರಾಗಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಅವರನ್ನು ಪ್ರೀತಿಸುವ ಗೌರವಿಸುವ ಎಲ್ಲರಿಗೂ ಹೆಮ್ಮೆ ಹಾಗೂ ಅಭಿಮಾನದ ಸಂಗತಿ ಎಂದರು.
ಕಾಂಗ್ರೆಸ್ ಪಕ್ಷ ಸಾಮಾನ್ಯ ಕಾರ್ಯಕರ್ತರಾಗಿ ರಾಜಕೀಯ ಜೀವನ ಪ್ರಾರಂಭಿಸಿ, ರಾಜ್ಯ ಮತ್ತು ಕೇಂದ್ರದ ಕಾಂಗ್ರೆಸ್ ಪಕ್ಷದ ಸರ್ಕಾರದಲ್ಲಿ ಉನ್ನತ ಹುದ್ದೆಗಳನ್ನು ದಕ್ಷತೆಯಿಂದ ನಿಭಾಯಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆಯಂತಹ ಹುದ್ದೆ ಅಲಂಕರಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ ಅವರಿಗೆ ನನ್ನ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ