ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅವ್ಯವಹಾರದ ವಿರುದ್ಧ ಜೂನ್ 28ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಶನಿವಾರ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು.
ಎಸ್ಟಿ ಮುಖಂಡರ ಸಭೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಯಿತು.
ಪ್ರಕರಣ ಉಲ್ಲೇಖಿಸಿ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಸರ್ಕಾರ ಎಸ್ಸಿ, ಎಸ್ಟಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಶಿಕ್ಷಣ, ಮನೆ, ಮೂಲಸೌಕರ್ಯ ಕೊಡಿಸುವ ಕೆಲಸ ಮಾಡಬೇಕು. ಅದಕ್ಕಾಗಿ ಪ್ರತಿ ಇಲಾಖೆ ಶೇಕಡಾ 24ರಷ್ಟು ಹಣ ಮೀಸಲಿಡುತ್ತೆ. ಸಿದ್ದರಾಮಯ್ಯ ಸರ್ಕಾರ ಕಳೆದ ವರ್ಷ 11,000 ಕೋಟಿ ರೂ. ಬಳಸಿದೆ. ಈ ವರ್ಷ 14 ಸಾವಿರ ಕೋಟಿ ಹಣವನ್ನು ದುರ್ಬಳಕೆ ಮಾಡಿದೆ. ಎಸ್ಸಿ, ಎಸ್ಟಿಗೆ ಮೀಸಲಿಟ್ಟಿದ್ದ 25,000 ಕೋಟಿ ರೂ. ದುರ್ಬಳಕೆಯಾಗಿದೆ ಎಂದು ಆರೋಪಿಸಿದರು.
ವಾಲ್ಮೀಕಿ ನಿಗಮದ ಅಮಾಯಕ ಅಧಿಕಾರಿ ನೇಣಿಗೆ ಶರಣಾಗಿದ್ದಾರೆ. ಸಚಿವರ ಮೌಖಿಕ ಆದೇಶದಂತೆ ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿದೆ. ವೈನ್ ಶಾಪ್, ಚಿನ್ನದ ಅಂಗಡಿಗಳಲ್ಲಿ ದಲಿತರ ಹಣ ಡ್ರಾ ಮಾಡಿದ್ರು. ಮುಖ್ಯಮಂತ್ರಿಗೆ ಮಾಹಿತಿ ಇಲ್ಲದೆ ಈ ರೀತಿ ಆಗಲು ಸಾಧ್ಯವಿಲ್ಲ. ಹಣಕಾಸು ಇಲಾಖೆಯಲ್ಲೇ ಭ್ರಷ್ಟಾಚಾರ ನಡೆದಿರುವ ಅನುಮಾನ ಇದೆ. ಸಿಎಂ ಸಿದ್ದರಾಮಯ್ಯ ಬಳಿಯೇ ಹಣಕಾಸು ಇಲಾಖೆಯಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿದ್ದೇವೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರ ರಾಜೀನಾಮೆ ಸಾಕಾಗಲ್ಲ. ಜೂನ್ 28ರಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ನಿರ್ಧರಿಸಿದೆ ಎಂದು ರಾಮುಲು ಹೇಳಿದರು.