ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಡಕಟ್ಟು ಜನಾಂಗದ ಯುವಕನೊಬ್ಬನ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಮಂಗಳವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರಲ್ಲಿ ನೆಲೆದ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬರ ಮೇಲೆ ಆರೋಪಿ ಸಿಗರೇಟ್ ಸೇದುತ್ತಾ ಅಮಲೇರಿದ ಸ್ಥಿತಿಯಲ್ಲಿ ಮೂತ್ರವಿಸರ್ಜಿಸಿರುವುದು ಕಂಡುಬಂದಿದೆ. ಆರೋಪಿ ವ್ಯಕ್ತಿಯನ್ನು ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಕೂಡಲೇ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸಿಧಿ ಜಿಲ್ಲಾ ಎಎಸ್ಪಿ ಅಂಜು ಲತಾ ಪಟೇಲ್ ತಿಳಿಸಿದ್ದಾರೆ.
ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.
ಪೊಲೀಸರು ತಕ್ಷಣವೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಓಡಿಹೋಗುತ್ತಿದ್ದ. ನಂತರ ಆತನನ್ನು ಮಧ್ಯರಾತ್ರಿ 2 ಗಂಟೆಗೆ ಹಿಡಿದು ವಿಚಾರಣೆಗೆ ಒಳಪಡಿಸಲಾಗಿದೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.