ಹೊಸ ದಿಗಂತ ವರದಿ, ಮಂಗಳೂರು:
ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾದ ವಿದೇಶಿ ಪ್ರಜೆಯೋರ್ವನನ್ನು ಬಂಧಿಸಿದ್ದು , ರೂ. 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ವಾಸವಿದ್ದ ನೈಜೀರಿಯಾ ಪ್ರಜೆ ಪೀಟರ್ ಇಕೆಡಿ ಬೆಲೆನ್ವೊ ಬಂಧಿತ ಆರೋಪಿ.
ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದು, ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೀರಿಯಾ ದೇಶದ ವಿದೇಶಿ ಪ್ರಜೆಯನ್ನು ಬಂಧಿಸಿದ್ದೇವೆ. ಈತನಿಂದ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಪ್ರಕರಣದ ವಿವರ
ಇತ್ತೀಚೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಂಪ್ವೆಲ್ ಬಳಿಯ ಲಾಡ್ಜ್ವೊಂದರಲ್ಲಿ ಇದ್ದುಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಹೈದರ್ ಯಾನೆ ಹೈದರ್ ಆಲಿ(51) ಎಂಬಾತನನ್ನು ಬಂಧಿಸಿ, ಆತನಿಂದ 75,000 ಮೌಲ್ಯದ 15 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು.
ಈ ಪ್ರಕರಣದಲ್ಲಿ ಮಾದಕ ವಸ್ತುವನ್ನು ಪೂರೈಕೆ ಮಾಡುವ ಡ್ರಗ್ಸ್ ಪೆಡ್ಲರ್ಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಈ ತನಿಖೆಯ ವೇಳೆ ಆರೋಪಿ ಹೈದರ್ ಯಾನೆ ಹೈದರ್ ಆಲಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇನ್ನಿತರ ಡ್ರಗ್ ಪೆಡ್ಲರ್ಗಳ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ ಪ್ರಮುಖ ಆರೋಪಿ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೇರಿಯಾ ದೇಶದ ವಿದೇಶಿ ಪ್ರಜೆ ಎಂದು ತಿಳಿದುಬಂದಿತ್ತು. ಅದರಂತೆ ಬೆಂಗಳೂರು ನಗರದ ದೊಮ್ಮಸಂದ್ರ ಗ್ರಾಮದ ಸ್ವಾಮಿ ವಿವೇಕಾನಂದ ನಗರದ ಬಾಡಿಗೆ ಮನೆಯೊಂದರ ಮೇಲೆ ದಾಳಿ ನಡೆಸಿ, ಮಾದಕ ವಸ್ತುವನ್ನು ಹೊಂದಿದ್ದ ನೈಜಿರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.
ವಾಸವಿದ್ದ ಬಾಡಿಗೆ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ಗಳು, 17 ಇನ್ ಅಕ್ಟಿವ್ ಸಿಮ್ ಕಾರ್ಡ್ಗಳು, 10 ವಿವಿಧ ಬ್ಯಾಂಕ್ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.