ಜಮ್ಮು, ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಸಹಿತ ಹಲವು ನಾಯಕರಿಗೆ ಗೃಹ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಾಲ್ಕನೇ ವಾರ್ಷಿಕೋತ್ಸವದ ಹಿನ್ನೆಲೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಅವರ ಪಕ್ಷದ ಕೆಲವು ಹಿರಿಯ ನಾಯಕರನ್ನು ಶನಿವಾರ ಗೃಹಬಂಧನದಲ್ಲಿ ಇರಿಸಲಾಗಿದೆ.

ಈ ಕುರಿತು ಮೆಹಬೂಬಾ ಮುಫ್ತಿ ಟ್ವೀಟ್ ಮಾಡಿದ್ದೂ, ಇಂದು ಇತರ ಹಿರಿಯ ಪಿಡಿಪಿ ನಾಯಕರೊಂದಿಗೆ ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದೆ.ಅಲ್ಲದೆ ನನ್ನ ಪಕ್ಷದ ಹಲವಾರು ಜನರನ್ನು ಪೊಲೀಸ್ ಠಾಣೆಗಳಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ. ಸುಪ್ರೀಂ ಕೋರ್ಟ್‌ಗೆ ಇಲ್ಲಿನ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಸುಳ್ಳು ಮಾಹಿತಿ ನೀಡಿ ತಮ್ಮ ಮೇಲೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಶ್ರೀನಗರದಾದ್ಯಂತ 370 ನೇ ವಿಧಿಯನ್ನು ರದ್ದುಗೊಳಿಸಿದ ನಡೆಯನ್ನು ಆಚರಿಸಲು ಕಾಶ್ಮೀರಿಗಳಿಗೆ ಕರೆ ನೀಡುವ ಬೃಹತ್‌ ಹೋರ್ಡಿಂಗ್‌ಗಳನ್ನು ಹಾಕಲಾಗಿದೆ. ಆದರೆ ಜನರ ನಿಜವಾದ ಭಾವನೆಯನ್ನು ಉಸಿರುಗಟ್ಟಿಸಲು ವಿವೇಚನಾರಹಿತ ಶಕ್ತಿಯನ್ನು ಬಳಸಲಾಗುತ್ತಿದೆ. ಆರ್ಟಿಕಲ್ 370 ವಿಚಾರಣೆಗೆ ಬಂದಿರುವ ಸಮಯದಲ್ಲಿ ಸುಪ್ರೀಂ ಕೋರ್ಟ್‌ ಈ ಬೆಳವಣಿಗೆಗಳ ಬಗ್ಗೆ ನಿಖರ ಮಾಹಿತಿ ತೆಗೆದುಕೊಳ್ಳುತ್ತದೆ ಎಂದು ಭಾವಿಸುತ್ತೇವೆ ಎಂದು ಹೇಳಿದ್ದಾರೆ.

ಕಳೆದ 4 ವರ್ಷಗಳ ಹಿಂದೆ ಅಂದರೆ ಆಗಸ್ಟ್ 5, 2019 ರಂದು ಕೇಂದ್ರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370ನೇ ವಿಧಿಯನ್ನು ಹಿಂತೆಗೆದುಕೊಂಡಿತ್ತು. ಅಲ್ಲದೆ ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!