August 7, 2026
Friday, August 7, 2026
spot_img

ಜನವಾಡದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಹೊಸದಿಗಂತ ವರದಿ ಬೀದರ್:

ರೈತರು, ಕಾರ್ಮಿಕರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಗ್ರಾಮೀಣ ಭಾಗದ ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡ ಈಶ್ವರಸಿಂಗ ಠಾಕೂರ ಅವರ ನೇತೃತ್ವದಲ್ಲಿ ಶುಕ್ರವಾರ ಜನವಾಡದಿಂದ ಬೀದರ್ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಹಾಗೂ ಶಾಂತಿಯುತ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಜನವಾಡದಲ್ಲಿ ಬೆಳಿಗ್ಗೆ ಆರಂಭವಾದ ಪಾದಯಾತ್ರೆ ಮರಖಲ, ಚಿಕ್ಕಪೇಟೆ ಹಾಗೂ ರಿಂಗ್‌ರಸ್ತೆ ಮಾರ್ಗವಾಗಿ ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಪಾದಯಾತ್ರೆಯಲ್ಲಿ ಜನವಾಡ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು, ಕಾರ್ಮಿಕರು, ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಸಾರ್ವಜನಿಕರು ಭಾಗವಹಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಬಳಿಕ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದರು. ಸಾರ್ವಜನಿಕರ ಸಮಸ್ಯೆಗಳನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ ಸಂಬಂಧಪಟ್ಟ ಇಲಾಖೆಗಳ ಮೂಲಕ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಜಿಲ್ಲೆಯ ರೈತರು ಕೃಷಿ ಸಾಲದ ಹೊರೆಯಿಂದ ಸಂಕಷ್ಟ ಎದುರಿಸುತ್ತಿದ್ದು, ಅವರ ಕೃಷಿ ಸಾಲ ಮನ್ನಾ ಮಾಡುವ ಕುರಿತು ರಾಜ್ಯ ಸರ್ಕಾರಕ್ಕೆ ಜಿಲ್ಲಾಡಳಿತದಿಂದ ಸೂಕ್ತ ಶಿಫಾರಸು ಮಾಡಬೇಕು ಎಂದು ಮನವಿ ಮಾಡಲಾಗಿದೆ. ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಹಣವನ್ನು ಅರ್ಹ ಫಲಾನುಭವಿಗಳಿಗೆ ಕೂಡಲೇ ಬಿಡುಗಡೆ ಮಾಡಬೇಕು. ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಅನ್ವಯವಾಗುವ ವಾರ್ಷಿಕ ರೂ.32,000 ಆದಾಯ ಮಿತಿಯನ್ನು ರದ್ದುಪಡಿಸುವಂತೆ ಸರ್ಕಾರಕ್ಕೆ ಶಿಫಾರಸು ಸಲ್ಲಿಸಬೇಕು ಎಂದು ಆಗ್ರಹಿಸಲಾಗಿದೆ.

ವಿದ್ಯುತ್ ಕಂಬ-ತಂತಿ ಬದಲಾವಣೆಗೆ ಮನವಿ

ಗ್ರಾಮೀಣ ಪ್ರದೇಶಗಳಲ್ಲಿ ಜೀರ್ಣಗೊಂಡಿರುವ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳಿಂದ ಸಾರ್ವಜನಿಕರು ಮತ್ತು ರೈತರ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆಯಿರುವುದರಿಂದ ಹಳೆಯ ಕಂಬ ಮತ್ತು ತಂತಿಗಳನ್ನು ತಕ್ಷಣ ಬದಲಾಯಿಸಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ವಿದ್ಯುತ್ ಇಲಾಖೆಗೆ ಸೂಚಿಸಬೇಕು ಎಂದು ಮನವಿ ಮಾಡಲಾಗಿದೆ.

ತಹಸೀಲ್ದಾರ್ ಕಚೇರಿಗಳಲ್ಲಿ ಕರಾರು ಫೋಡಿ, ನಮೂನೆ-10, ಹದ್ದಬಸ್ತ್ ಸೇರಿದಂತೆ ವಿವಿಧ ಕಂದಾಯ ಸಂಬಂಧಿತ ಅರ್ಜಿಗಳು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಕಳ್ಳತನ ಪ್ರಕರಣಗಳ ತನಿಖೆ ವೇಗಗೊಳಿಸಲು ಆಗ್ರಹ

ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಕಳ್ಳತನ ಪ್ರಕರಣಗಳ ಆರೋಪಿಗಳನ್ನು ಶೀಘ್ರ ಬಂಧಿಸಿ, ಪ್ರಕರಣಗಳ ತನಿಖೆಯನ್ನು ಪರಿಣಾಮಕಾರಿಯಾಗಿ ನಡೆಸಬೇಕು. ಸ್ಥಗಿತಗೊಂಡಿರುವ ಜನವಾಡ ನದಿ ಕುಡಿಯುವ ನೀರಿನ ಸರಬರಾಜು ಯೋಜನೆಯನ್ನು ಪುನರಾರಂಭಿಸಿ, ಜನವಾಡ ಹಾಗೂ ಮಾಳೇಗಾಂವ ಹೋಬಳಿಯ ಎಲ್ಲಾ ಗ್ರಾಮಗಳಿಗೆ ನಿರಂತರ ಹಾಗೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಯೋಜನೆಯನ್ನು ವಿಳಂಬವಿಲ್ಲದೆ ಪುನರಾರಂಭಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.

ಜನವಾಡದಿಂದ ಅಲಿಯಾಬಾದ್ (ಜೆ) ಗ್ರಾಮದವರೆಗೆ ರಸ್ತೆ ನಿರ್ಮಾಣ ಮಾಡಬೇಕು ಎಂಬುದು ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ. ರಸ್ತೆ ಅಭಿವೃದ್ಧಿಯಾಗುವುದರಿಂದ ಗ್ರಾಮಸ್ಥರು, ರೈತರು ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲಿದೆ. ಅದೇ ರೀತಿ ಚಿಮಕೋಡ–ಅಲ್ಲಾಪುರ ಹಾಗೂ ಚಿಮಕೋಡ–ನೇಮತಾಬಾದ್ ಸಂಪರ್ಕ ಸೇತುವೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಸೇತುವೆಗಳ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರು ಹಾಗೂ ರೈತರಿಗೆ ಸಂಚಾರಕ್ಕೆ ಅನುಕೂಲವಾಗುವಂತೆ ತಾತ್ಕಾಲಿಕ ರಸ್ತೆ ನಿರ್ಮಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಎಲ್ಲ ಬೇಡಿಕೆಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಶೀಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಬೀದರ್ ಗ್ರಾಮಾಂತರ ಮಂಡಲ ಅಧ್ಯಕ್ಷ ದೀಪಕ ಬಂಡೇಪ್ಪಾ ಗಾದಗೆ ಅಲಿಯಂಬರ್, ಸಾರ್ವಜನಿಕರ ಸಮಸ್ಯೆಗಳಿಗೆ ಕೇವಲ ತಾತ್ಕಾಲಿಕ ಪರಿಹಾರ ನೀಡದೆ, ಶಾಶ್ವತ ಪರಿಹಾರ ಕಲ್ಪಿಸಲು ಜಿಲ್ಲಾಡಳಿತ ಮುಂದಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟಿಲ್, ಪಿರಪ್ಪ ಯರ್ನಳ್ಳಿ, ರಾಜೇಂದ್ರ ಪೂಜಾರಿ, ಶಶಿಧರ್ ಹೊಸಳ್ಳಿ, ಲುಂಬಿಣಿ ಗೌತಂ, ರಾಜಕುಮಾರ್ ಪಾಟಿಲ್, ಬಾಬುರಾವ್ ಮಲ್ಕಾಪೂರ್, ಲಕ್ಷ್ಮಣ್ ರಾಠೋಡ, ಗುರುನಾಥ್ ಜ್ಯಾಂತಿಕರ್, ನಾಗೇಂದ್ರ ಪಾಟಿಲ್, ನಿಜಲಿಂಗ ಪಾಟಿಲ್, ವಿಜಯಕುಮಾರ ಗಾದಗಿ, ಭೀಮಣ್ಣ ಚಿಕ್ಕಪೇಟೆ, ಪ್ರಕಾಶ್ ಕೋಳಿ, ವಿಜಯಕುಮಾರ್ ಅಣಕಲೆ, ಸಂತೋಷ್ ಬಿರಾದರ್, ಶಂಕರ್ ಹಲ್ಗೆ, ಗೀತಾ ಠಾಕೂರ, ಸುರಜಸಿಂಗ ಠಾಕೂರ, ಅಶೋಕ ಪಾಟೀಲ್, ಮಲ್ಲಿಕಾರ್ಜುನ ಕಾರಬಾರಿ, ಭದ್ರೇಶ ಬಸಂತಪೂರ, ಸಂತೋಷ ಕಾಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !