July 23, 2026
Thursday, July 23, 2026
spot_img

ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ: ವಿದ್ಯಾರ್ಥಿಗಳ ಆಕ್ರೋಶ, ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ :

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಸಂಬಂಧ ದೇಶಾದ್ಯಂತ ಕೇಳಿಬಂದಿರುವ ಅಕ್ರಮಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು, ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು, ಮುಸ್ಲಿಂ ಮುಖಂಡರು ಹಾಗೂ ವಿಧ್ಯಾರ್ಥಿಗಳ ಪಾಲಕರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಪರೀಕ್ಷಾ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವಿರುದ್ಧ ತೀವ್ರ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಕೈಯಲ್ಲಿ ಫಲಕಗಳನ್ನು ಹಿಡಿದು, “ವಿದ್ಯಾರ್ಥಿಗಳಿಗೆ ನ್ಯಾಯ ಬೇಕು”, “ನೀಟ್ ಅಕ್ರಮ ನಿಲ್ಲಿಸಿ”, “ಪ್ರಶ್ನೆ ಪತ್ರಿಕೆ ಸೋರಿಕೆಗೆ ಹೊಣೆಗಾರರಿಗೆ ಕಠಿಣ ಶಿಕ್ಷೆ ನೀಡಿ” ಮೋದಿ ಚೋರ್ ಮೋದಿ‌ ಚೋರ್ ಎಂಬ ಘೋಷಣೆಗಳನ್ನು ಕೂಗಿ ಅಸಮಾಧಾನ ಹೋರಹಾಕಿದರು.‌

ಗುರುವಾರ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಜಮಾವಣೆ ಕೊಂಡು ಪರೀಕ್ಷಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಮರುಸ್ಥಾಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಮಾತನಾಡಿ, ದೇಶದ ಲಕ್ಷಾಂತರ ವಿದ್ಯಾರ್ಥಿಗಳು ವರ್ಷಪೂರ್ತಿ ಕಠಿಣ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಿಂದ ಪ್ರಾಮಾಣಿಕ ವಿದ್ಯಾರ್ಥಿಗಳ ಶ್ರಮ ವ್ಯರ್ಥವಾಗುತ್ತಿದೆ. ಇದು ಕೇವಲ ಪರೀಕ್ಷಾ ಲೋಪವಲ್ಲ, ವಿದ್ಯಾರ್ಥಿಗಳ ಭವಿಷ್ಯದ ಮೇಲಿನ ಗಂಭೀರ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಈ ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಕೇಂದ್ರ ಸರ್ಕಾರ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಅಥವಾ ಸ್ವತಂತ್ರ ಉನ್ನತ ಮಟ್ಟದ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಗುರುತಿಸಿ ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಾರ್ಯವೈಖರಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.

ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, “ನಾವು ವರ್ಷಪೂರ್ತಿ ಹಗಲಿರುಳು ಓದಿ ಪರೀಕ್ಷೆ ಬರೆಯುತ್ತೇವೆ. ಆದರೆ ಕೆಲವರ ಅಕ್ರಮಗಳಿಂದ ನಮ್ಮ ಕನಸುಗಳು ನಾಶವಾಗುತ್ತಿವೆ. ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲೇಬೇಕು. ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವುದನ್ನು ನಿಲ್ಲಿಸಬೇಕು,” ಎಂದು ತಮ್ಮ ನೋವನ್ನು ಹೋರಹಾಕಿದರು.‌
ಬೃಹತ್ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ರಾಣಿ ಚೆನ್ನಮ್ಮ ವೃತ್ತ ಹಾಗೂ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಸರ್ಕಾರ ತಕ್ಷಣವೇ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಸ್ಪಂದಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಬೇಕು. ಇಲ್ಲವಾದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ವಿವಿಧ ವಿದ್ಯಾರ್ಥಿ ಮತ್ತು ಮುಸ್ಲಿಂ ಮುಖಂಡರು ಕೇಂದ್ರ ಸರ್ಕಾರಕ್ಕೆ ಎಚ್ಚಿರಿಕೆ ನೀಡಿದರು.‌

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !