ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯ ರಸ್ತೆ ಗುಂಡಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ನಗರದಾದ್ಯಂತ ಬೃಹತ್ ಮಟ್ಟದ ‘ವೈಟ್ ಟಾಪಿಂಗ್’ ಯೋಜನೆಗೆ ಚಾಲನೆ ನೀಡಲು ನಿರ್ಧರಿಸಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 1,700 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.
ಬೆಂಗಳೂರಿನ ರಸ್ತೆಗಳ ದುಸ್ಥಿತಿಯ ಬಗ್ಗೆ ಸಾರ್ವಜನಿಕರು ಹಾಗೂ ಉದ್ಯಮಿಗಳಿಂದ ವ್ಯಕ್ತವಾಗಿದ್ದ ತೀವ್ರ ಆಕ್ರೋಶಕ್ಕೆ ಸ್ಪಂದಿಸಿರುವ ಸರ್ಕಾರ, ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಯೋಜನೆಯ ಮೊದಲ ಹಂತದಲ್ಲಿ 145 ಕಿ.ಮೀ. ಉದ್ದದ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು. ಇದು ಕೇವಲ ರಸ್ತೆ ಡಾಂಬರೀಕರಣಕ್ಕೆ ಸೀಮಿತವಾಗದೆ, ಜನಸ್ನೇಹಿ ಪಾದಚಾರಿ ಮಾರ್ಗಗಳ ನಿರ್ಮಾಣವನ್ನೂ ಒಳಗೊಂಡಿರಲಿದೆ.
ನಗರದ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಮತ್ತು ಮಳೆಗಾಲದಲ್ಲಿ ಪದೇ ಪದೇ ರಸ್ತೆಗಳು ಹಾಳಾಗುವುದನ್ನು ತಡೆಯಲು ವೈಟ್ ಟಾಪಿಂಗ್ ತಂತ್ರಜ್ಞಾನ ಸಹಕಾರಿಯಾಗಲಿದೆ. “ಬೆಂಗಳೂರನ್ನು ಅಂತರಾಷ್ಟ್ರೀಯ ಮಟ್ಟದ ಮೂಲಸೌಕರ್ಯ ಹೊಂದಿದ ನಗರವನ್ನಾಗಿ ಮಾಡುವುದು ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ 500 ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸುತ್ತೇವೆ” ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಯೋಜನೆಯಿಂದಾಗಿ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳು ಗುಂಡಿಮುಕ್ತವಾಗಲಿದ್ದು, ಸುಗಮ ಸಂಚಾರಕ್ಕೆ ಹಾದಿ ಸುಗಮವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

