ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಮತ್ತೆ ಆತಂಕದ ವಾತಾವರಣ ಸೃಷ್ಟಿಸಿದೆ. ಜನವಸತಿ ಪ್ರದೇಶಗಳತ್ತ ನುಗ್ಗುತ್ತಿರುವ ಕಾಡಾನೆಗಳ ಹಾವಳಿಗೆ ಕಡಿವಾಣ ಹಾಕುವಂತೆ ಸ್ಥಳೀಯರಿಂದ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಅರಣ್ಯ ಇಲಾಖೆ ಮಹತ್ವದ ಕಾರ್ಯಾಚರಣೆಗೆ ಮುಂದಾಗಿದೆ.
ಕಳೆದ ಎರಡು ದಿನಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವ ಹಿನ್ನೆಲೆಯಲ್ಲಿ, 10 ಗಂಡು ಕಾಡಾನೆಗಳನ್ನು ಸೆರೆಹಿಡಿಯಲು ಅನುಮತಿ ನೀಡಿದ್ದು, ಸಂಘರ್ಷ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಲು ಮುಂದಾಗಿದೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ವಾರ್ಡನ್ ಈ ಸಂಬಂಧ ಆದೇಶ ಹೊರಡಿಸಿದ್ದು, ಹಾಸನ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳು ನವೆಂಬರ್ 15ರಂದು ಸಲ್ಲಿಸಿದ ಮೌಖಿಕ ಮನವಿಯನ್ನು ಪರಿಗಣಿಸಿ ಅನುಮತಿ ನೀಡಲಾಗಿದೆ.
ಇದನ್ನೂ ಓದಿ:
ಇದಕ್ಕೂ ಮೊದಲು ವನ್ಯಜೀವಿ (ಸಂರಕ್ಷಣೆ) ಕಾಯಿದೆ, 1972ರ ಸೆಕ್ಷನ್ 11(1)(ಎ) ಅಡಿಯಲ್ಲಿ ಎರಡು ಕಾಡಾನೆಗಳನ್ನು ಸೆರೆಹಿಡಿಯಲು ಅನುಮತಿ ನೀಡಲಾಗಿತ್ತು. ಇದೀಗ ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಈ ಸಂಖ್ಯೆಯನ್ನು 10ಕ್ಕೆ ಹೆಚ್ಚಿಸಲಾಗಿದೆ.
ಜಿಲ್ಲೆಯಲ್ಲಿ ಇತ್ತೀಚೆಗೆ ಸಂಭವಿಸಿದ ಎರಡು ಪ್ರತ್ಯೇಕ ದುರಂತಗಳು ಜನರಲ್ಲಿ ತೀವ್ರ ಆತಂಕ ಮೂಡಿಸಿವೆ. ಭಾನುವಾರ ಬೇಲೂರು ತಾಲೂಕಿನ ಚಿಕ್ಕಡಹಳ್ಳಿ ಗ್ರಾಮದ 50 ವರ್ಷದ ಜಯಮ್ಮ ಅವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದಕ್ಕೂ ಮುನ್ನ 64 ವರ್ಷದ ಹಫೀಜ್ ಉರ್ ರೆಹಮಾನ್ ಕೂಡ ಆನೆಯ ದಾಳಿಯಿಂದ ಮೃತಪಟ್ಟಿದ್ದರು. ಸತತ ಎರಡು ದಿನಗಳಲ್ಲಿ ಎರಡು ಜೀವಗಳು ಬಲಿಯಾಗಿರುವುದು ಸ್ಥಳೀಯರ ಆಕ್ರೋಶಕ್ಕೂ ಕಾರಣವಾಗಿದೆ.



