ಹೊಸದಿಗಂತ ವರದಿ ಹಾಸನ:
ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರು ಮಂದಿಯನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ಬಂಧಿಸಿ, ಸುಮಾರು 10 ಲಕ್ಷ ರೂ ಮೌಲ್ಯದ 100 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ಪಟ್ಟಣದಲ್ಲಿ ಎರಡು ಕಾರುಗಳಲ್ಲಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಮಂಗಳೂರು ಮೂಲದ ನಾಲ್ವರು ಹಾಗೂ ಕೇರಳ ಮೂಲದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಂದು ಹ್ಯುಂಡೈ ಕಾರು ಹಾಗೂ ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಗೆ ಅಂತರರಾಜ್ಯ ಮಾದಕ ವಸ್ತು ಜಾಲದೊಂದಿಗೆ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



