ಹೊಸದಿಗಂತ ವರದಿ, ಚಿತ್ರದುರ್ಗ
ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಡ್ರಾಮ ಪಾರ್ಟ್-೨ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಲೇವಡಿ ಮಾಡಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ಮಾಡುವುದಿಲ್ಲ ಎಂದು ಸರ್ಕಾರ ಎಲ್ಲಿಯೂ ಹೇಳಿಲ್ಲ. ತಾಂತ್ರಿಕ ಕಾರಣದಿಂದ ಅದು ಸ್ಥಗಿತಗೊಂಡಿದೆ. ಆದರೆ ಕಾಂಗ್ರೆಸ್‌ನವರಿಗೆ ಮಾಡಲು ಕೆಲಸವಿಲ್ಲ. ಹಾಗಾಗಿ ಸುಖಾಸುಮ್ಮನೆ ಪಾದಯಾತ್ರೆ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಪಾದಯಾತ್ರೆ ಮೂಲಕ ಸಿದ್ದರಾಮಯ್ಯ ಅವರಿಗೆ ತನ್ನ ಶಕ್ತಿ ಪ್ರದರ್ಶನ ಮಾಡಲು ಹೊರಟಿದ್ದಾರೆ ಅಷ್ಟೆ ಎಂದರು.
ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಮತ್ತೆ ಒತ್ತಾಯ ಕೇಳಿ ಬಂದಿರುವ ಕುರಿತು ಪ್ರತಿಕ್ರಿಯಿಸಿ, ಯಾರ ರಾಜಿನಾಮೆಯೂ ಇಲ್ಲ. ಕಾಂಗ್ರೆಸ್‌ನವರು ಆರು ದಿನ ಅಧಿವೇಶನ ಹಾಳು ಮಾಡಿದ್ದಾರೆ. ಇದರಿಂದ ಸಾರ್ವಜನಿಕರ ಹಣ ಪೋಲಾಗಿದೆ. ಜನರ ಬಗ್ಗೆ ಕಾಳಜಿ ಇದ್ದಿದ್ದರೆ ಸದನದಿಂದ ಹೊರಗೆ ಧರಣಿ ನಡೆಸುತ್ತಿದ್ದರು. ಅಧಿವೇಶನದಲ್ಲಿ ಜನರ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಎಂದು ಹೇಳಿದರು.
ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ಮಕ್ಕಳನ್ನು ಸುರಕ್ಷಿತವಾಗಿ ಕರೆತರಲು ರಾಜ್ಯ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ. ಇದಕ್ಕಾಗಿ ಒಬ್ಬ ನೋಡೆಲ್ ಅಧಿಕಾರಿಯನ್ನೂ ನೇಮಕ ಮಾಡಲಾಗಿದೆ. ಪೋಷಕರು ಆತಂಕಕ್ಕೊಳಗಾಗುವುದು ಬೇಡ ಎಂದು ತಿಳಿಸಿದರು.
ರಾಜ್ಯದಲ್ಲಿ ಈಗಾಗಲೇ ೨.೫೦ ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲಾಗಿದೆ. ಹೆಚ್ಚುವರಿ ರಾಗಿ ಖರೀದಿಗೆ ರೈತರು ಒತ್ತಾಯ ಮಾಡುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಕೇಂದ್ರದಿಂದ ಅನುಮತಿ ಬಂದ ತಕ್ಷಣ ರಾಗಿ ಖರೀದಿ ಆರಂಭಿಸುತ್ತೇವೆ ಎಂದು ತಿಳಿಸಿದರು.