ಕಾರ್ಯಪ್ಪ ಕಾಲೇಜಿನಲ್ಲಿ ಸಭೆ: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಹೊಸದಿಗಂತ ವರದಿ,ಮಡಿಕೇರಿ :

ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಹೊರಡಿಸಿರುವ ಮಧ್ಯಂತರ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಸೋಮವಾರ ಉಪನ್ಯಾಸಕರೊಂದಿಗೆ ಹಾಗೂ ಮಂಗಳವಾರ ಪೋಷಕ ಹಾಗೂ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.
ಪ್ರಾಂಶುಪಾಲ ಡಾ.ಚೌರೀರ ಜಗತ್ ತಿಮ್ಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋರ್ಟ್ ಆದೇಶದ ಕುರಿತು ಜಾಗೃತಿ ಮೂಡಿಸಲಾಯಿತು.
ಕಾಲೇಜಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಂಡು ಪಾಠ ಪ್ರವಚನಗಳು ಎಂದಿನಂತೆ ನಡೆಯಲು ಶಿಕ್ಷಕ ವೃಂದ ಹಾಗೂ ಪೋಷಕರು ಸಹಕಾರ ನೀಡಬೇಕೆಂದು ತಿಳಿಸಿದ ಪ್ರಾಂಶುಪಾಲರು, ಈ ಕುರಿತು ವಿದ್ಯಾರ್ಥಿಗಳು ಯಾವುದೇ ಬಾಹ್ಯ ಶಕ್ತಿಗಳ ಪ್ರಚೋದನೆಗೆ ಒಳಗಾಗಿ ಕಾಲೇಜು ವಾತಾವರಣವನ್ನು ಹಾಳುಗೆಡವದಂತೆ ಎಲ್ಲರೂ ಸಹಕರಿಸಬೇಕೆಂದು ಕರೆ ನೀಡಿದರು.
ಉಪನ್ಯಾಸಕರು ಸಕ್ರಿಯವಾಗಿ ತೊಡಗಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾರ್ಯಪ್ರವೃತ್ತರಾಗಬೇಕೆಂದು ಕಿವಿಮಾತು ಹೇಳಿದರು.
ಬುಧವಾರದಿಂದ ಎಂದಿನಂತೆ ಪಾಠ ಪ್ರವಚನಗಳು ನಡೆಯಲಿದ್ದು, ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳಿಗೆ ಸೂಕ್ತ ತಯಾರಿ ನಡೆಸಬೇಕು. ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳನ್ನು ಹೊರತುಪಡಿಸಿ, ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!