September 25, 2026
Friday, September 25, 2026
spot_img

ಬರದ ಸ್ಥಿತಿಗತಿ ಕುರಿತು ಸಭೆ: ಪರಿಹಾರ ಕಾರ್ಯ ಚುರುಕುಗೊಳಿಸಲು ಡಾ. ಜಿ. ಪರಮೇಶ್ವರ್ ಸೂಚನೆ

ಹೊಸದಿಗಂತ ವರದಿ ಬೆಳಗಾವಿ:

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿನ ಬರ ಪರಿಸ್ಥಿತಿ, ಜನರಿಗೆ ಒದಗಿಸಲಾಗುತ್ತಿರುವ ಪರಿಹಾರ ಕ್ರಮಗಳು ಹಾಗೂ ಇದುವರೆಗೆ ಕೈಗೊಂಡಿರುವ ನಿರ್ವಹಣಾ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬರದಿಂದ ಎದುರಾಗಬಹುದಾದ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ:

ಬರ ಪರಿಸ್ಥಿತಿಯಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಹಾಗೂ ಸರ್ಕಾರದ ಪರಿಹಾರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲೆಯ ಬರ ನಿರ್ವಹಣೆಯ ಪ್ರಸ್ತುತ ಸ್ಥಿತಿ, ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಚರ್ಚೆ ನಡೆಯಿತು. ಅಧಿಕಾರಿಗಳು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಸ್ಥಳೀಯ ಶಾಸಕರಾದ ಅಶೋಕ್ ಎಂ. ಪಟ್ಟಣ, ರಾಜು ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹಾಗೂ ಬೆಳಗಾವಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Must Read