ಜೂ.23 ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಸಭೆ: ಸಚಿವ ಸುನಿಲ್

ಹೊಸದಿಗಂತ ವರದಿ,ಮಂಗಳೂರು:

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಿಗೆ ವೇಗ ನೀಡುವುದು ಮತ್ತು ಎದುರಾಗಿರುವ ಕೆಲವೊಂದು ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಜೂ.23 ಅಥವಾ 24 ರಂದು ಮಂಗಳೂರಿನಲ್ಲಿ ವಿವಿಧ ಇಲಾಖೆಗಳ ರಾಜ್ಯಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಕೈಗೆತ್ತಿಕೊಂಡ ಕಾಮಗಾರಿಗಳು ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದಾಗಿ ಕುಂಠಿತವಾಗಿವೆ. ಅದನ್ನು ಸರಿಪಡಿಸಿ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ರಾಜ್ಯ ಮಟ್ಟದ ಅಧಿಕಾರಿಗಳ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಕೆಯುಐಡಿಎಫ್‌ಸಿ ಎಂಡಿ, ಜಲಸಿರಿ ಯೋಜನೆಯ ಅಧಿಕಾರಿ, ಗೈಲ್ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಕರೆಸಲಾಗುವುದು. ಸರಕಾರದಿಂದ ಬರುವ ಅನುದಾನ ಸರಿಯಾದ ರೀತಿಯಲ್ಲಿ ಬಳಕೆಯಾಗಬೇಕು. ಈಗಾಗಲೇ ಕೈಗೆತ್ತಿಕೊಂಡಿರುವ ಹಲವು ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಜನತೆ ಸಮಸ್ಯೆ ಎದುರಿಸುವಂತಾಗಿದೆ ಇದಕ್ಕೆ ಶೀಘ್ರ ಕಡಿವಾಣ ಹಾಕಲಾಗುವುದು ಎಂದರು.
ಅಧಿಕಾರಿಗಳೊಂದಿಗಿನ ಸಭೆಗೆ ಮುನ್ನ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಲಾಗುವುದು. ಆಗಿರುವ ಲೋಪದೋಷಗಳನ್ನು ಪಟ್ಟಿ ಮಾಡಿ ಸರಿಪಡಿಸುವ ಕಾರ್ಯ ತುರ್ತಾಗಿ ಆಗಲಿದೆ ಎಂದವರು ಹೇಳಿದರು.
೧೫ನೇ ಹಣಕಾಸಿನ ಅನುದಾನ ಮತ್ತು ಮಹಾತ್ಮಾಗಾಂಧಿ ವಿಕಾಸ್ ಯೋಜನೆ ಈ ಎರಡೂ ಅನುದಾನಗಳು ಕೂಡ ಮಹಾನಗರ ಪಾಲಿಕೆಗೆ ಬಂದಿದೆ. ಇದರ ಸಮರ್ಪಕ ಬಳಕೆಯಾಗಬೇಕಾದರೆ ಮೊದಲು ಈಗಿನ ಕಾಮಗಾರಿಗಳು ವ್ಯವಸ್ಥಿತ ರೀತಿಯಲ್ಲಿ ಪೂರ್ಣಗೊಳ್ಳಬೇಕು. ಗೊಂದಲ ಸೃಷ್ಟಿಯಾಗಬಾರದು ಎಂಬ ಕಾರಣಕ್ಕೆ ಪ್ರತ್ಯೇಕವಾಗಿ ಬ್ಲಾಕ್‌ಗಳನ್ನು ನಿರ್ಮಾಣ ಮಾಡಿಕೊಂಡು ಆಯಾ ಬ್ಲಾಕ್‌ನಲ್ಲಿ ಒಂದೊಂದೇ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅದು ಪೂರ್ಣಗೊಂಡ ಬಳಿಕವೇ ಮತ್ತೊಂದು ಕಾಮಗಾರಿ ನಡೆಸಲಾಗುವುದು. ಆಗ ಸಮಸ್ಯೆ ಉಂಟಾಗಲಾರದು ಎಂದು ಸಚಿವ ಸುನಿಲ್ ಹೇಳಿದರು.
ಮುಂಗಾರು ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚರಂಡಿ ವ್ಯವಸ್ಥೆಯನ್ನು ತುರ್ತಾಗಿ ಸರಿಪಡಿಸುವ ಮೂಲಕ ರಸ್ತೆಯಲ್ಲಿ ನೀರು ಹರಿಯದಂತೆ ಎಚ್ಚರವಹಿಸುವಂತೆ ಸೂಚನೆ ನೀಡಲಾಗಿದೆ ಎಂದವರು ತಿಳಿಸಿದರು.
ಕಂಕನಾಡಿ, ಕದ್ರಿ ಮತ್ತು ಸುರತ್ಕಲ್ ಮಾರುಕಟ್ಟೆ ಕಾಮಗಾರಿ ಶೀಘ್ರ ಮುಗಿಸಿ ಡಿಸೆಂಬರ್ ವೇಳೆಗೆ ಉದ್ಘಾಟನೆಗೆ ಸಿದ್ಧಗೊಳಿಸುವಂತೆ ಸೂಚಿಸಲಾಗಿದೆ. ಬಾಕಿ ಇರುವ ಕಂದಾಯ ವಸೂಲಾತಿಗೆ ಕೂಡ ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೆ ಸುರತ್ಕಲ್ ಇಡ್ಯಾದಲ್ಲಿ ನಿರ್ಮಾಣವಾಗುತ್ತಿರುವ ೬೦೦ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು. ಶಾಸಕರ ನೇತೃತ್ವದಲ್ಲಿ ಈ ಕಾರ್ಯ ನಡೆಯಲಿದೆ ಎಂದು ಸುನಿಲ್ ಕುಮಾರ್ ತಿಳಿಸಿದರು.
ಶಾಸಕ ಡಾ.ವೈ.ಭರತ್ ಶೆಟ್ಟಿ ಮಾತನಾಡಿ ಸುರತ್ಕಲ್ ರುದ್ರಭೂಮಿ ನಿರ್ಮಾಣ ಕಾರ್ಯ ಆರಂಭವಾಗಿದ್ದು, ನವೆಂಬರ್‌ನಲ್ಲಿ ಪೂರ್ಣಗೊಳ್ಳಲಿದೆ. ಇಲ್ಲಿ ಎಲೆಕ್ಟ್ರಿಕ್ ವ್ಯವಸ್ಥೆಯ ಮೂಲಕವೂ ದಹನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಸಜ್ಜಿತ ರೀತಿಯಲ್ಲಿ ನಿರ್ಮಾಣವಾಗಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರು, ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!