August 7, 2026
Friday, August 7, 2026
spot_img

ಮತ್ತೆ ಕಾವೇರಿದ ‘ಮೇಕೆದಾಟು ಕಾವು’: ಆ.13ಕ್ಕೆ ‘ಕರ್ನಾಟಕ ಬಂದ್’ ಗೆ ವಾಟಾಳ್ ನಾಗರಾಜ್ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕುಡಿಯುವ ನೀರಿನ ಭದ್ರತೆಗಾಗಿ ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಮೇಕೆದಾಟು ಯೋಜನೆ ಮತ್ತೆ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಸದ್ದು ಮಾಡುತ್ತಿದೆ. ಯೋಜನೆಯನ್ನು ತಕ್ಷಣ ಜಾರಿಗೊಳಿಸಬೇಕು ಎಂಬ ಒತ್ತಾಯದೊಂದಿಗೆ ಕನ್ನಡ ಪರ ಸಂಘಟನೆಗಳು ಹೋರಾಟದ ಕಹಳೆ ಊದಿದ್ದು, ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಿಸುವ ಪ್ರಯತ್ನ ಆರಂಭಿಸಿವೆ.

ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೊಳಿಸುವಂತೆ ಆಗ್ರಹಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಮನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕಪ್ಪು ಬಾವುಟ ಪ್ರದರ್ಶಿಸಿ ಯೋಜನೆ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡು ವಿರುದ್ಧ ವಾಟಾಳ್ ವಾಗ್ದಾಳಿ

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್, ಕಾವೇರಿ ವಿಚಾರದಲ್ಲಿ ತಮಿಳುನಾಡು ಸರ್ಕಾರ ನಿರಂತರವಾಗಿ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದರು. ಬೆಂಗಳೂರಿನ ಭವಿಷ್ಯದ ಕುಡಿಯುವ ನೀರಿನ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮೇಕೆದಾಟು ಯೋಜನೆಯನ್ನು ಯಾವುದೇ ವಿಳಂಬವಿಲ್ಲದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಈ ಯೋಜನೆಗೆ ಯಾರ ಅನುಮತಿಯ ನಿರೀಕ್ಷೆಯಲ್ಲಿರದೆ ರಾಜ್ಯ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ:

ಕರ್ನಾಟಕ ಬಂದ್‌ಗೆ ಸಿದ್ಧತೆ

ಮೇಕೆದಾಟು ಯೋಜನೆ ಜಾರಿ ಹಾಗೂ ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವಂತೆ ಆಗ್ರಹಿಸಿ ಆಗಸ್ಟ್ 13ರಂದು ಸಮಗ್ರ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ವಾಟಾಳ್ ನಾಗರಾಜ್ ಘೋಷಿಸಿದರು. ಮುಖ್ಯಮಂತ್ರಿ ಬಂದ್‌ ಕೈಬಿಡುವಂತೆ ಮನವಿ ಮಾಡಿದ್ದರೂ, ಈ ಕುರಿತು ಸರ್ಕಾರದಿಂದ ಯಾವುದೇ ಅಧಿಕೃತ ಮಾತುಕತೆ ನಡೆದಿಲ್ಲ ಎಂದು ಅವರು ಹೇಳಿದರು.

ಅತ್ತಿಬೆಲೆ ಗಡಿ ಬಂದ್ ಎಚ್ಚರಿಕೆ

ರಾಜ್ಯ ಬಂದ್‌ಗೆ ಮುನ್ನ ಆಗಸ್ಟ್ 10ರಂದು ಅತ್ತಿಬೆಲೆ ಗಡಿಯಲ್ಲಿ ಪ್ರತಿಭಟನೆ ನಡೆಸಿ ಗಡಿ ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !