ಹೊಸದಿಗಂತ ವರದಿ ಕೊಪ್ಪಳ:
ಮಾನಸಿಕ ಆರೋಗ್ಯ ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಲಿಂಗರಾಜು ಟಿ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ನಗರದ ನೌಕಕರ ಭವನದಲ್ಲಿ ಅಕ್ಟೋಬರ್ 10ರಂದು ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಕುರಿತ ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನಿಗೆ ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಮಾನಸಿಕ ಆರೋಗ್ಯ ಕೂಡ ಅಷ್ಟೇ ಮುಖ್ಯ. ಎರಡನ್ನು ಸಮತೋಲನವಾಗಿ ಕಾಪಾಡಿಕೊಂಡು ಹೋಗಬೇಕು. ಮೆದಳುನಲ್ಲಿರುವ ರಾಸಾಯನಿಕ ಬದಲಾವಣೆ, ಮಾದಕ ವಸ್ತುಗಳಾದ ಗಾಂಜಾ, ಅಫೀಮ್ ಹಾಗೂ ಆಲ್ಕೋಹಾಲು ಸೇವನೆ ಮತ್ತು ಮೆದುಳಿಗೆ ಸಂಬಂಧಿಸಿದ ಸೋಂಕು, ಗಡ್ಡೆ, ಪೆಟ್ಟು, ಕುಟುಂಬ, ಹಣಕಾಸು, ಉದ್ಯೋಗ, ರೀತಿ ನೀತಿಗಳ ಗೊಂದಲಗಳು ಮಾನಸಿಕ ರೋಗಕ್ಕೆ ಮುಖ್ಯ ಕಾರಣ ಎಂದರು.