ಹಾಲಿನ ದರ ಹೆಚ್ಚಳ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು (KMF) ನಂದಿನಿ ಹಾಲಿನ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ನೀಡಿದೆ.

ಪ್ರತಿ ಲೀಟರ್ ಪ್ಯಾಕೆಟ್ ಹಾಲಿನ ದರವನ್ನು 2.10 ರೂ. ನಷ್ಟು ಹೆಚ್ಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.

ತುರ್ತು ಪರಿಸ್ಥಿತಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್‌ ಸರ್ಕಾರ ಜನರಿಗೆ ಬೆಲೆ ಏರಿಕೆ ಕೊಡುಗೆ ನೀಡಿದ್ದು, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬಿ.ವೈ ವಿಜಯೇಂದ್ರ
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ. ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ. ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. .

ಆರ್‌. ಅಶೋಕ್‌ 
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕರ್ನಾಟಕ ಕಾಂಗ್ರೆಸ್‌ ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್‌ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ. ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂ. ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ.ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ನಿಮಗೆ ಬಡವರು, ಮಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ ಎಂದು ಆಗ್ರಹಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!