Sunday, October 12, 2025

ಶಾಲೆ, ದೇವಸ್ಥಾನ, ಮೈದಾನಗಳಲ್ಲಿ RSS ಶಾಖೆಗೆ ನಿರ್ಬಂಧ? ಐಟಿ-ಬಿಟಿ ಸಚಿವರಿಂದ ಸಿದ್ದರಾಮಯ್ಯಗೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸರ್ಕಾರಿ ಸ್ಥಳಗಳು ಮತ್ತು ಮುಜರಾಯಿ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಎಲ್ಲಾ ಚಟುವಟಿಕೆಗಳನ್ನು ಸರ್ಕಾರ ನಿಷೇಧಿಸುತ್ತಾ ಎಂಬ ಪ್ರಶ್ನೆಯೊಂದು ಈಗ ಮುನ್ನೆಲೆಗೆ ಬಂದಿದೆ. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸರ್ಕಾರದ ಆವರಣಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿರುವುದು ಈ ಬೆಳವಣಿಗೆಗೆ ಕಾರಣವಾಗಿದೆ.

ಪ್ರಿಯಾಂಕ್ ಖರ್ಗೆ ಅವರ ಈ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರವಾನಿಸಿದ್ದಾರೆ. ಕೂಡಲೇ ಈ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.

ಖರ್ಗೆಯವರ ಪ್ರಮುಖ ಆರೋಪ ಮತ್ತು ಆಗ್ರಹಗಳು:

ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳನ್ನು ನಿಗ್ರಹಿಸಲು ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯಲು ಸಂವಿಧಾನವು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ಆದರೆ, ಆರ್‌ಎಸ್‌ಎಸ್ ಸಂಘಟನೆಯು ಸರ್ಕಾರಿ, ಅನುದಾನಿತ ಶಾಲೆಗಳು ಮತ್ತು ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆಗಳನ್ನು ನಡೆಸುತ್ತಿದೆ. ಈ ವೇಳೆ ಘೋಷಣೆಗಳನ್ನು ಕೂಗುವ ಮೂಲಕ ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ನಿಷೇಧದ ವ್ಯಾಪ್ತಿ:

ನಾಡಿನ ಮಕ್ಕಳು, ಯುವ ಸಮುದಾಯ ಮತ್ತು ಸಮಾಜದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು, ಸರ್ಕಾರದ ಅನುದಾನಿತ ಶಾಲೆಗಳು, ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಸಂಘಟನೆಯು ‘ಶಾಖೆ’, ‘ಸಾಂಘಿಕ್’ ಅಥವಾ ‘ಬೈಠಕ್’ ಹೆಸರಿನಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಸದ್ಯಕ್ಕೆ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಸರ್ಕಾರ ಯಾವುದೇ ಅಧಿಕೃತ ಆದೇಶವನ್ನು ಪ್ರಕಟಿಸಿಲ್ಲ. ಒಂದು ವೇಳೆ ಆದೇಶ ಪ್ರಕಟಗೊಂಡರೆ, ಅಧಿಕೃತವಾಗಿ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಬೀಳಲಿದೆ.

error: Content is protected !!