Thursday, January 8, 2026

ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಮಿನಿ ಬಸ್: 32 ಪ್ರವಾಸಿಗರಿಗೆ ಗಾಯ, ಮೂವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಪ್ರಖ್ಯಾತ ಪ್ರವಾಸಿ ತಾಣವಾದ ನೀಲಗಿರಿ ಜಿಲ್ಲೆಯ ಊಟಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ಸೊಂದು ಸುಮಾರು 120 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಬಸ್ಸಿನಲ್ಲಿದ್ದ 32 ಪ್ರಯಾಣಿಕರು ಗಾಯಗೊಂಡಿದ್ದಾರೆ.

ನೀಲಗಿರಿ ಜಿಲ್ಲೆಯ ಕಲ್ಲಕೊರೈ ಹಾಡ ಎಂಬ ಪ್ರದೇಶದ ಬಳಿ ಈ ಘಟನೆ ನಡೆದಿದೆ. ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಠಾತ್ತನೆ ರಸ್ತೆಯ ಪಕ್ಕದಲ್ಲಿದ್ದ ಆಳವಾದ ಕಂದಕಕ್ಕೆ ಉರುಳಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ಪ್ರಯಾಣಿಕರು ಗಾಯಗೊಂಡು ಸಹಾಯಕ್ಕಾಗಿ ಕಿರುಚಾಡುತ್ತಿದ್ದರು.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ತಕ್ಷಣವೇ ಊಟಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ತುತ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಮೂವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸ್ಥಳೀಯ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬ್ರೇಕ್ ವೈಫಲ್ಯ ಅಥವಾ ಅತಿ ವೇಗ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.

error: Content is protected !!