Wednesday, August 10, 2022

Latest Posts

ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿರುವ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಮರುಪಾವತಿಸಲು ಸಚಿವ ಚವ್ಹಾಣ್ ಮನವಿ

ಹೊಸ ದಿಗಂತ ವರದಿ, ಬೀದರ್ :

ಕೊರೋನಾ ಹಿನ್ನೆಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕ ಸಂಕಷ್ಟದಲ್ಲಿದ್ದು, ವಿವಿಧ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿರುವ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಸಾಲ ಮರುಪಾವತಿಸುವಂತೆ ಒತ್ತಡ ಅಥವಾ ಕಿರುಕುಳ ನೀಡಬಾರದೆಂದು ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ಮನವಿ ಮಾಡಿದ್ದಾರೆ.
ಸಾಲಗಾರರ ಕಿರುಕುಳದಿಂದಾಗಿ ಕಲಬುರಗಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಅಧ್ಯಕ್ಷರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳು ಸ್ಥಗಿತಗೊಂಡಿದ್ದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಂಗಾಲಾಗಿವೆ. ಸಂಸ್ಥೆಗಳನ್ನು ಮುನ್ನಡೆಸಿಕೊಂಡು ಹೋಗಲು ಸಾಲ ಮಾಡಿಕೊಂಡಿದ್ದಾರೆ. ಈಗಲೂ ಆರ್ಥಿಕ ಪರಿಸ್ಥಿತಿ ಸುಧಾರಿಸದೇ ಇರುವುದರಿಂದ ಸಾಲದ ಕಂತುಗಳನ್ನು ಪಾವತಿಸಲು ಶಾಲಾ, ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾದ ನಂತರ ಕನಿಷ್ಟ 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ಕೋರಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶಾಲೆ, ಕಾಲೇಜುಗಳಲ್ಲಿ ಮೂಲಸೌಕರ್ಯ ವೃದ್ಧಿ, ಶಾಲಾ ವಾಹನ ಖರೀದಿ ಅಥವಾ ಇನ್ನಿತರೆ ಉದ್ದೇಶಗಳಿಗಾಗಿ ಸಾಲ ಪಡೆದಿರುತ್ತಾರೆ. ಕೊರೊನಾ ಹಿನ್ನೆಲೆಯಲ್ಲಿ ಮಕ್ಕಳಿಂದ ಹೆಚ್ಚುವರಿ ಶುಲ್ಕ ಪಡೆಯದಂತೆ ಸೂಚನೆಯಿದೆ. ಕೆಲವು ಶಿಕ್ಷಣ ಸಂಸ್ಥೆಯವರು ಮಾನವೀಯತೆಯ ದೃಷ್ಟಿಯಿಂದ ಯಾವುದೇ ಶುಲ್ಕವಿಲ್ಲದೇ ಬೋಧನೆ ಮಾಡುತ್ತಿರುವ ಉದಾಹರಣೆಗಳಿವೆ.
ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳು ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ವಾಹನಗಳನ್ನು ಜಪ್ತಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರಿಂದಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತದೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್‍ಗಳು ಹಾಗೂ ಹಣಕಾಸು ಸಂಸ್ಥೆಗಳು ಮಾನವೀಯತೆಯಿಂದ ವರ್ತಿಸಬೇಕು. ಜಿಲ್ಲೆಯಲ್ಲಿ ಆತ್ಮಹತ್ಯೆಯಂತಹ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss