ಹೊಸದಿಗಂತ ಮೈಸೂರು :
ಮೈಸೂರು ದಸರಾ ಅಂಗವಾಗಿ ಮಾವುತರು, ಕಾವಾಡಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಮಾವುತರಿಗೆ ಉಪಹಾರ ಬಡಿಸಿದರು.
ಬಳಿಕ ಆನೆಗಳ ಪಾಲನೆ, ಪೋಷಣೆ ಮಾಡುತ್ತಿರುವ ಕಾವಾಡಿಗರು ಹಾಗೂ ಮಾವುತರ ಕಾರ್ಯವನ್ನು ಪ್ರಶಂಸಿಸಿ ಯೋಗಕ್ಷೇಮ ವಿಚಾರಿಸಿದರು. ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕವಾಗಿ ತೆರೆದಿರುವ ಶಾಲೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾವುತ ಮತ್ತು ಕಾವಾಡಿಗರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು.
ಇದೇ ವೇಳೆ ಅರಮನೆ ಆವರಣದಲ್ಲಿ ತೆರೆಯಲಾಗಿರುವ ತಾತ್ಕಾಲಿಕ ಆರೋಗ್ಯ ತಪಾಸಣೆ ಕೇಂದ್ರವನ್ನು ಸಚಿವರು ವೀಕ್ಷಿಸಿದರು.
ನರಸಿಂಹ ರಾಜ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.