ಸ್ಮೃತಿ ಇರಾನಿ ಭೇಟಿಯಾದ ಸಚಿವೆ ಹೆಬ್ಬಾಳ್ಕರ್: ಅನುದಾನ ಬಿಡುಗಡೆಗೆ ಮನವಿ

ಹೊಸದಿಗಂತ ವರದಿ,ಬೆಳಗಾವಿ:

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಮಾತುಕತೆ ನಡೆಸಿದರು.

ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋದಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದರು. ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಮನವಿ ಮಾಡಿದರು.

ತಕ್ಷಣ ಎಲ್ಲವುಗಳಿಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವೆ ಸ್ಮೃತಿ ಇರಾನಿ ಸೂಚನೆ ನೀಡಿದರು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!