January20, 2026
Tuesday, January 20, 2026
spot_img

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದರು.

ಬೆಂಗಳೂರಿನಲ್ಲಿಂದು ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲು ನಿರ್ಣಯ ಕೈಗೊಳ್ಳಲಾಯಿತು ಎಂದರು.

ಕಳೆದ 13 ವರ್ಷಗಳಿಂದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಈಶ್ವರ ಬಿ ಖಂಡ್ರೆ ಅವರು ಕಳೆದ ಒಂದು ವರ್ಷದಿಂದ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದರು.

ತಮ್ಮ ಪೂಜ್ಯ ತಂದೆ ಭೀಮಣ್ಣ ಖಂಡ್ರೆಯವರ ಮಾರ್ಗದಲ್ಲೇ ನಡೆದು, ಸಮುದಾಯದ ಏಳಿಗೆಗಾಗಿ ಶ್ರಮಿಸುತ್ತಿರುವ ಈಶ್ವರ ಬಿ ಖಂಡ್ರೆ ಈಗ ಮಹಾ ಸಭಾದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸಮಾಜಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ.

ತಮ್ಮನ್ನು ಮಹಾಸಭಾದ ನೂತನ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಕ್ಕಾಗಿ ಕಾರ್ಯಕಾರಿ ಸಮಿತಿಗೆ ಧನ್ಯವಾದ ಅರ್ಪಿಸಿದ ಅವರು, ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆಯಲ್ಲ. ಹೀಗಾಗಿ ಸಮಾಜದ ಎಲ್ಲ ಒಳ ಪಂಗಡಗಳನ್ನು ಒಗ್ಗೂಡಿಸುವುದು ಅತ್ಯಂತ ಮುಖ್ಯವಾಗಿದ್ದು, ತಾವು ಈ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು.

Must Read