ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಳ್ಳಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೇ ಉನ್ನತ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ನೀರು ಸರಬರಾಜು ವ್ಯವಸ್ಥೆಯನ್ನು ಸದಾ ಸುಸ್ಥಿತಿಯಲ್ಲಿಡುವಂತೆ ಸೂಚಿಸಿದ್ದಾರೆ.
ಶುದ್ಧ ನೀರು ಪೂರೈಕೆಗೆ ಪ್ರಥಮ ಆದ್ಯತೆ:
ಮಹಾತ್ಮ ಗಾಂಧೀಜಿಯವರ ‘ಭಾರತದ ಆತ್ಮ ಹಳ್ಳಿಗಳಲ್ಲಿದೆ’ ಎಂಬ ಚಿಂತನೆಯಂತೆ, ಗ್ರಾಮೀಣ ಭಾಗದ ಪ್ರತಿಯೊಬ್ಬ ನಾಗರಿಕನಿಗೂ ಕಲುಷಿತ ಮುಕ್ತ ಹಾಗೂ ಸುರಕ್ಷಿತ ಕುಡಿಯುವ ನೀರನ್ನು ತಲುಪಿಸುವುದು ನಮ್ಮ ಸರ್ಕಾರದ ಮೊದಲ ಕರ್ತವ್ಯವಾಗಿದೆ ಎಂದಿದ್ದಾರೆ.
ಮುಂಗಡ ಅನುದಾನ ಬಿಡುಗಡೆ:
ಮಳೆಯ ಕೊರತೆ ಅಥವಾ ಇನ್ಯಾವುದೇ ತಾಂತ್ರಿಕ ಕಾರಣಗಳಿಂದ ನೀರಿನ ಸಮಸ್ಯೆ ಎದುರಾಗದಂತೆ ತಡೆಯಲು ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಅಗತ್ಯವಿರುವ ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ. ನಿಲ್ದಾಣಗಳು ಅಥವಾ ಕೊಳವೆಬಾವಿಗಳಲ್ಲಿ ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದ್ದಾರೆ.
ದೀರ್ಘಾವಧಿ ಯೋಜನೆಗೆ ಸಂಕಲ್ಪ:
ಮುಂದಿನ 25 ವರ್ಷಗಳ ಕಾಲ ಗ್ರಾಮೀಣ ಪ್ರದೇಶಗಳಿಗೆ ಯಾವುದೇ ನೀರಿನ ಭೀತಿ ಎದುರಾಗದಂತೆ ಭೂಮೇಲ್ಮೈ ನೀರನ್ನು ಬಳಸಿ ಶಾಶ್ವತ ಕುಡಿಯುವ ನೀರು ಪೂರೈಸುವ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:
ಗ್ರಾಮ ಪಂಚಾಯತ್‌ಗಳ ಜವಾಬ್ದಾರಿ:
ಕಲುಷಿತ ನೀರಿನ ಸೇವನೆಯಿಂದ ಸಾರ್ವಜನಿಕರ ಆರೋಗ್ಯ ಹದಗೆಡದಂತೆ ಸ್ಥಳೀಯ ಗ್ರಾಮ ಪಂಚಾಯತ್‌ಗಳು ನಿರಂತರವಾಗಿ ನೀರಿನ ಗುಣಮಟ್ಟ ತಪಾಸಣೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಗ್ರಾಮೀಣ ಮೂಲಸೌಕರ್ಯ, ರಸ್ತೆ ಸಂಪರ್ಕ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಬಲಪಡಿಸಲು ಅಧಿಕಾರಿಗಳು ತಳಮಟ್ಟದಲ್ಲಿ ಸಮನ್ವಯತೆಯಿಂದ ಕೆಲಸ ಮಾಡಬೇಕು, ಇದರಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಎಚ್ಚರಿಸಿದ್ದಾರೆ.



